ಅಕ್ರಮ ಮರಳು ದಂಧೆಗೆ ಬ್ರೇಕ್ : ರಾಜ್ಯ ಪೊಲೀಸರಿಗೆ ಗೃಹ ಸಚಿವರ ಕಟ್ಟುನಿಟ್ಟಿನ ಸೂಚನೆ

0
86

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ಮಟ್ಟಹಾಕುವ ಉದ್ದೇಶದಿಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಸಚಿವರ ಸೂಚನೆಯ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ರಾಜ್ಯದ ಎಲ್ಲಾ ಪೊಲೀಸ್ ಉನ್ನತ ಅಧಿಕಾರಿಗಳಿಗೆ ಕಠಿಣ ಸುತ್ತೋಲೆಯನ್ನು ಹೊರಡಿಸಿದ್ದು, ಅಕ್ರಮ ಮರಳು ದಂಧೆ ವಿರುದ್ಧ ‘ಶೂನ್ಯ ಸಹಿಷ್ಣುತೆ’ (Zero Tolerance) ನೀತಿಯನ್ನು ತಕ್ಷಣದಿಂದಲೇ ಜಾರಿಗೆ ತರಲು ಆದೇಶಿಸಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆಯು ನೈಸರ್ಗಿಕ ಪರಿಸರಕ್ಕೆ ಹಾನಿ ಉಂಟುಮಾಡುವುದಲ್ಲದೆ, ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ಆದಾಯಕ್ಕೂ ಧಕ್ಕೆ ತರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಅಕ್ರಮ ಮರಳು ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲು ವಿಶೇಷ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, “ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ರಾಜ್ಯದ ನೈಸರ್ಗಿಕ ಸಂಪತ್ತಿನ ಲೂಟಿ ಮಾತ್ರವಲ್ಲ, ಸಾರ್ವಜನಿಕ ಹಿತಾಸಕ್ತಿ ಮತ್ತು ಕಾನೂನು ಸುವ್ಯವಸ್ಥೆಗೆ ಗಂಭೀರ ಸವಾಲಾಗಿದೆ. ಸರ್ಕಾರ ಯಾವುದೇ ಅಕ್ರಮವನ್ನು ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಅಕ್ರಮ ಮರಳು ದಂಧೆಯಲ್ಲಿ ಭಾಗಿಯಾಗಿರುವವರಷ್ಟೇ ಅಲ್ಲ, ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧವೂ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಟಾಸ್ಕ್‌ಫೋರ್ಸ್ ಸಮಿತಿಗಳನ್ನು ಮತ್ತಷ್ಟು ಸಕ್ರಿಯಗೊಳಿಸುವಂತೆ ಸೂಚಿಸಲಾಗಿದೆ. ಅಕ್ರಮ ಮರಳು ಗಣಿಗಾರಿಕೆ ನಡೆಯುವ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ನಿರಂತರ ನಿಗಾವಹಿಸುವುದು ಹಾಗೂ ಅಕ್ರಮ ಸಾಗಾಣಿಕೆಯನ್ನು ತಡೆಯುವುದು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ನೇರ ಜವಾಬ್ದಾರಿಯಾಗಿರಲಿದೆ.

ಅಂತರರಾಜ್ಯ ಮಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಣಿಕೆಗೆ ತಡೆ ಒಡ್ಡಲು ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಜಂಟಿ ಕಾರ್ಯಾಚರಣೆ ನಡೆಸುವಂತೆ ಸೂಚಿಸಲಾಗಿದೆ. ಗಡಿ ಭಾಗದ ತನಿಖಾ ಠಾಣೆಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿ, ಅಗತ್ಯ ಮೂಲಸೌಕರ್ಯಗಳ ಕೊರತೆ ಕಂಡುಬಂದರೆ ತಕ್ಷಣ ಸರ್ಕಾರದ ಗಮನಕ್ಕೆ ತರಲು ಆದೇಶಿಸಲಾಗಿದೆ.

ಪ್ರತಿ ಪೊಲೀಸ್ ಘಟಕವು ತನ್ನ ವ್ಯಾಪ್ತಿಯಲ್ಲಿ ನಡೆಯುವ ಅಕ್ರಮ ಮರಳು ಚಟುವಟಿಕೆಗಳ ಕುರಿತು ಗುಪ್ತಚರ ಮಾಹಿತಿ ಸಂಗ್ರಹಿಸಿ, ಯಾವುದೇ ಮುನ್ಸೂಚನೆ ಇಲ್ಲದೆ ದಿಢೀರ್ ದಾಳಿ ನಡೆಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಅಕ್ರಮ ಮರಳು ದಂಧೆಯಲ್ಲಿ ನಿರಂತರವಾಗಿ ತೊಡಗಿರುವ ಕುಖ್ಯಾತ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆಯೂ ಸೂಚನೆ ನೀಡಲಾಗಿದೆ.

ಇದಲ್ಲದೆ, ಪ್ರತಿ ತಿಂಗಳು ನಡೆಯುವ ಅಪರಾಧ ಪರಿಶೀಲನಾ ಸಭೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಣಿಕೆಗೆ ಸಂಬಂಧಿಸಿದ ಪ್ರಕರಣಗಳನ್ನು ಠಾಣಾವಾರು ಪರಿಶೀಲಿಸಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಭೆಗಳನ್ನು ನಿಯಮಿತವಾಗಿ ನಡೆಸಿ ಇಲಾಖೆಗಳ ನಡುವೆ ಸಮನ್ವಯವನ್ನು ಬಲಪಡಿಸುವಂತೆ ಸೂಚಿಸಲಾಗಿದೆ.

ಯಾವುದೇ ಪೊಲೀಸ್ ಠಾಣೆ ಅಥವಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಯುವಲ್ಲಿ ನಿರ್ಲಕ್ಷ್ಯ ಅಥವಾ ವೈಫಲ್ಯ ಕಂಡುಬಂದಲ್ಲಿ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ನೇರವಾಗಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.