ವಿಟ್ಲ : ಚಾಲಕನ ನಿಯಂತ್ರಣ ಕಳೆದುಕೊಂಡ ಶಾಲಾ ಬಸ್‌ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ 15ಕ್ಕೂ ಅಧಿಕ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.
ವಿಟ್ಲದ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ಬಸ್ ಕುಂಟುಕುಡೇಲು ಇಳಿಜಾರು ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎನ್ನಲಾಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ ನೇರವಾಗಿ ಕೆಳಭಾಗಕ್ಕೆ ಚಲಿಸಿ, ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಬಸ್ ಹಾನಿಗೊಂಡಿದ್ದು, ವಿದ್ಯುತ್ ಕಂಬ ಸಂಪೂರ್ಣವಾಗಿ ತುಂಡಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬಸ್‌ನಲ್ಲಿ 15ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರೂ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯ ಸಂಭವಿಸಿಲ್ಲ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

