ಲೋಕಸಭಾ ಚುನಾವಣೆಯಲ್ಲಿ ಗೆದ್ದಿರುವ ಕರ್ನಾಟಕದ ಪ್ರಮುಖ ನಾಯಕರಿಂದ ತೆರವಾಗಿರುವ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗ ಇಂದು ರಾಜ್ಯದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.
ನವೆಂಬರ್ 13ಕ್ಕೆ ಕರ್ನಾಟದ 3 ವಿಧಾನಸಭೆ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆಯಲಿದೆ. ಅಕ್ಟೋಬರ್ 25ಕ್ಕೆ ನಾಮಪತ್ರ ಸಲ್ಲಿಕೆ ಕೊನೆಯ ದಿನವಾಗಿದೆ. ಅಕ್ಟೋಬರ್ 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 13ರಂದು ಮೂರು ಅಸೆಂಬ್ಲಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ಚನ್ನಪಟ್ಟಣ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ಶಿಗ್ಗಾಂವಿ ಹಾಗೂ ಬಳ್ಳಾರಿ ಕಾಂಗ್ರೆಸ್ ಸಂಸದ ಈ. ತುಕಾರಾಮ್ ಅವರ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿದೆ.
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಿಗಧಿಯಾಗಿದೆ. ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಘೋಷಣೆ ಆಗಲಿದೆ.