ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯ ಯಶಸ್ಸಿಗೆ ಕರೆ

0
63


ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತ ರೀತಿಯಲ್ಲಿ ಮಾಡಿಕೊಳ್ಳುವುದರೊಂದಿಗೆ ಸಮಿಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಅಗತ್ಯವಿರುವ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಿದೆ. ಜಿಲ್ಲೆಯಲ್ಲಿ ನಗರ ವ್ಯಾಪ್ತಿಯಲ್ಲಿ 1.05 ಲಕ್ಷ ಹಾಗೂ ಗ್ರಾಮೀಣ ಭಾಗದಲ್ಲಿ 2.14 ಲಕ್ಷ ಸೇರಿದಂತೆ ಒಟ್ಟು ಸುಮಾರು 3.19 ಲಕ್ಷ ಕುಟುಂಬಗಳಿದ್ದು, ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಗಬೇಕು. ಯಾವುದೇ ಕುಟುಂಬಗಳು ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರ ವಹಿಸಿ ಸಮೀಕ್ಷೆ ನಡೆಸಬೇಕು ಎಂದರು.
ಸಾಮಾನ್ಯವಾಗಿ ಎಲ್ಲ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕ ಇರುವುದರಿಂದ ವಾಸದ ಮನೆಗಳ ಆರ್.ಆರ್. ಮೀಟರ್ ಆಧಾರದಲ್ಲಿ ಮನೆಗಳನ್ನು ಗುರುತಿಸಿ, ಅಲ್ಲಿರುವ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗುವುದಿಲ್ಲ. ಹೀಗಾಗಿ ಮೊದಲ ಹಂತದಲ್ಲಿ ಜಿಲ್ಲೆಯಲ್ಲಿರುವ ಎಲ್ಲ ಮನೆಗಳ ವಿದ್ಯುತ್ ಮೀಟರ್ ರೀಡರ್‌ಗಳಿಂದ ಕುಟುಂಬಗಳ ಪಟ್ಟಿ ಮಾಡಿ, ಮನೆಗಳಿಗೆ ಜಿಯೋ ಟ್ಯಾಗಿಂಗ್‌ಗಾಗಿ ಸ್ಟಿಕ್ಕರ್‌ಗಳನ್ನು ಅಳವಡಿಸುವ ಕಾರ್ಯ ಆರಂಭಿಸಲಾಗಿದ್ದು, ಸೆಪ್ಟಂಬರ್ 10 ರ ಒಳಗಾಗಿ ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯವನ್ನು ಮೆಸ್ಕಾಂ ಇಲಾಖೆಯವರು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಅನಧಿಕೃತ ಕಟ್ಟಡಗಳು, ಮತ್ತಿತರ ಪ್ರದೇಶಗಳಲ್ಲಿ ಆರ್. ಆರ್ ನಂಬರ್ ಹೊಂದಿದೇ ಇರುವ ಕುಟುಂಬಗಳು ಜಿಲ್ಲೆಯಲ್ಲಿವೆ. ಅಂತಹವರ ಕುಟುಂಬಗಳೂ ಕೂಡ ಸಮೀಕ್ಷೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಹೀಗಾಗಿ ಅಂತಹ ಕುಟುಂಬಗಳ ಪ್ರತ್ಯೇಕ ಪಟ್ಟಿಯನ್ನು ತಯಾರಿಸಿ, ಸದರಿ ಮನೆಗಳಿಗೂ ಸಹ ಗ್ರಾಮ ಲೆಕ್ಕಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೂಲಕ ಜಿಯೋ ಟ್ಯಾಗ್ ಮಾಡಲು ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವು , ಸೆಪ್ಟಂಬರ್ 22 ರಿಂದ ಆರಂಭಗೊAಡು ಅಕ್ಟೋಬರ್ 07 ರೊಳಗೆ ಪೂರ್ಣಗೊಳಿಸುವ ಗುರಿಯನ್ನು ನಿಗದಿಪಡಿಸಲಾಗಿದೆ. ಸಮೀಕ್ಷಾ ಕಾರ್ಯವನ್ನು ಶಾಲಾ ಶಿಕ್ಷಕರು ಕೈಗೊಳ್ಳಲಿದ್ದು, ಸಮೀಕ್ಷೆಗಾಗಿಯೇ ವಿಶೇಷವಾದ ಆಪ್ ಅಭಿವೃದ್ಧಿಪಡಿಸಲಾಗಿದ್ದು, ಈ ಆಪ್ ಮೂಲಕವೇ ಸಮೀಕ್ಷೆ ನಡೆಸಲಾಗುವುದು ಎಂದರು.
ಜಿಲ್ಲೆಯಲ್ಲಿನ ಒಟ್ಟು ಕುಟುಂಬಗಳ ಸಂಖ್ಯೆಗೆ ಅನುಗುಣವಾಗಿ, ಪ್ರತಿ ಸಮೀಕ್ಷೆದಾರರು ಕನಿಷ್ಟ 80 ರಿಂದ 100 ಮನೆಗಳಿಗೆ ಖುದ್ದು ಭೇಟಿ ಮಾಡಿ ಸಮೀಕ್ಷೆ ಮಾಡಬೇಕಾಗುತ್ತದೆ ಎಂದ ಅವರು, ರಾಜ್ಯ ಮಟ್ಟದಲ್ಲಿ ಮಾಸ್ಟರ್ ಟ್ರೈನರ್ಸ್ ಗಳ ತರಬೇತಿಯು ಇದೆ ಸೆಪ್ಟೆಂಬರ್ 8 ರಂದು ನಡೆಯಲಿದ್ದು, ಜಿಲ್ಲಾ ಮಟ್ಟದಲ್ಲಿ ಸೆಪ್ಟೆಂಬರ್ 9 -11 ರ ವರೆಗೆ ತರಬೇತಿ ಆಯೋಜಿಸಲಾಗುವುದು. ಸಮೀಕ್ಷೆ ಕಾರ್ಯಗಳ ಮೇಲುಸ್ತುವಾರಿ ಮಾಡಲು ಪ್ರತಿ ತಾಲೂಕಿಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಸಹಾಯಕ ಕಮಿಷನರ್ ರಶ್ಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಕಪ್ಪ ಆರ್ ಲಮಾಣಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here