ಅಪ್ರಾಪ್ತ ಬಾಲಕಿ ಮೇಲಿನ ದೌರ್ಜನ್ಯ ಪ್ರಕರಣ : 64 ವರ್ಷದ ಆರೋಪಿಗೆ 5 ವರ್ಷ ಜೈಲು

0
17

ಸುಳ್ಯ : ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುಮಂಗಲ ಚಕಲಬ್ಬಿ ಅವರು ಆರೋಪಿಗೆ 5 ವರ್ಷಗಳ ಸಾಧಾರಣ ಕಾರಾಗೃಹ ಶಿಕ್ಷೆ ಹಾಗೂ ₹35 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಶಿಕ್ಷೆಗೆ ಗುರಿಯಾದ ಆರೋಪಿಯನ್ನು ಕಡಬ ತಾಲೂಕಿನ ಕುದ್ಮಾರು ಗ್ರಾಮದ ನಿವಾಸಿ ಅಬ್ದುಲ್ಲಾ (64) ಎಂದು ಗುರುತಿಸಲಾಗಿದೆ.

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಕ್ರಮಾಂಕ 12/2020ರ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 354(A1), 506 ಹಾಗೂ ಪೋಕ್ಸೋ ಕಾಯ್ದೆ-2012ರ ಕಲಂ 8ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಕುರಿತು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.

ಪ್ರಕರಣದ ವಿಚಾರಣೆ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು. ಅಭಿಯೋಗವು ಮಂಡಿಸಿದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನ್ಯಾಯಾಲಯವು ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಅಬ್ದುಲ್ಲಾನನ್ನು ದೋಷಿ ಎಂದು ಘೋಷಿಸಿದೆ.

ನ್ಯಾಯಾಲಯವು ಆರೋಪಿಗೆ 5 ವರ್ಷಗಳ ಸಾಧಾರಣ ಕಾರಾಗೃಹ ಶಿಕ್ಷೆ ಹಾಗೂ ₹35 ಸಾವಿರ ನಗದು ದಂಡ ವಿಧಿಸಿದೆ. ದಂಡದ ಮೊತ್ತ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಲಾಗಿದೆ.

ಪ್ರಕರಣದ ಅಂದಿನ ತನಿಖಾಧಿಕಾರಿಯಾಗಿದ್ದ ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಅವರು ಪ್ರಕರಣದ ತನಿಖೆಯನ್ನು ಸಮರ್ಥವಾಗಿ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಅವರು ವಾದ ಮಂಡಿಸಿ, ಅಭಿಯೋಗದ ಪರ ಸಾಕ್ಷ್ಯಾಧಾರಗಳನ್ನು ಸಮರ್ಥವಾಗಿ ಮಂಡಿಸುವ ಮೂಲಕ ಆರೋಪ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.