ಅಜ್ಜಿಯ ಚಿನ್ನದ ಬಳೆ ಕದ್ದ ಪ್ರಕರಣ : 2 ಬಳೆಗಳ ಸಮೇತ ಮೊಮ್ಮಗ ಅರೆಸ್ಟ್

0
22

ಬಂಟ್ವಾಳ : ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜಿಕಾರು ಉದ್ದದಗುಡ್ಡೆಯಲ್ಲಿ ವೃದ್ಧೆಯಿಂದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಮೊಮ್ಮಗನನ್ನೇ ಪೊಲೀಸರು ಬಂಧಿಸಿದ್ದಾರೆ.

ಆ.14ರಂದು 82 ವರ್ಷದ ಅವ್ವಮ್ಮ ಅವರು ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬಂದ ಅಪರಿಚಿತ ವ್ಯಕ್ತಿಯೊಬ್ಬರು ಅವರ ಕೈಯಲ್ಲಿದ್ದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದೊಯ್ದಿದ್ದರು. ಸುಮಾರು 40 ಗ್ರಾಂ ತೂಕದ ಈ ಬಳೆಗಳ ಮೌಲ್ಯ ಸುಮಾರು 75 ಸಾವಿರ ರೂ. ಎಂದು ತಿಳಿದುಬಂದಿದೆ. ಈ ವೇಳೆ ವೃದ್ಧೆಯ ಕೈಗೆ ರಕ್ತಗಾಯವಾಗಿತ್ತು.

ಘಟನೆಗೆ ಸಂಬಂಧಿಸಿ ಅವ್ವಮ್ಮ ಅವರ ಪುತ್ರ ಸಾದಿಕ್ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ವಿಚಾರಣೆ ನಡೆಸಿ, ಪ್ರಕರಣದ ಹಿಂದೆ ಕುಟುಂಬದ ಸದಸ್ಯನ ಕೈವಾಡ ಇರುವುದನ್ನು ಪತ್ತೆಹಚ್ಚಿದ್ದಾರೆ.

ಆ.16ರಂದು ಪ್ರಕರಣದ ಆರೋಪಿ ಹಾಗೂ ಅವ್ವಮ್ಮ ಅವರ ಮೊಮ್ಮಗ ತೆಂಕಕಜಿಕಾರು ನಿವಾಸಿ ಶಬೀರ್ (33) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಕಳವು ಮಾಡಲಾಗಿದ್ದ ಎರಡು ಚಿನ್ನದ ಬಳೆಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ಹೆಚ್ಚಿನ ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಕಾರ್ಯಾಚರಣೆ: ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಅವರ ನೇತೃತ್ವದಲ್ಲಿ ಬೆಳ್ತಂಗಡಿ ಗ್ರಾಮಾಂತರ ಸಿಪಿಐ ರವಿ ಬಿ.ಎಸ್., ಪುಂಜಾಲಕಟ್ಟೆ ಠಾಣೆ ಪಿಎಸ್‌ಐ ರಾಜೇಶ್ ಕೆ.ವಿ. ಹಾಗೂ ಪೊಲೀಸ್ ಸಿಬ್ಬಂದಿ ಮತ್ತು ಜಿಲ್ಲಾ ತಾಂತ್ರಿಕ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.