8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ – ಆರೋಪಿ ನ್ಯಾಯಾಲಯಕ್ಕೆ ಶರಣು

0
29

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ಮನೆಗೆ ನುಗ್ಗಿ ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದು, ಪೊಲೀಸರು ಆತನನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ.

ಕಾಂಪ್ರಬೈಲು ನಿವಾಸಿ ಸತೀಶ್ ಶೆಣೈ ಅವರು ಫೆಬ್ರವರಿ 4ರಂದು ಸಂಜೆ ಮನೆಯನ್ನು ಬೀಗ ಹಾಕಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ರಾತ್ರಿ ಮನೆಗೆ ಹಿಂದಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದಿರುವುದು ಕಂಡುಬಂದಿತ್ತು.

ಮನೆಯೊಳಗೆ ಪರಿಶೀಲಿಸಿದಾಗ ಕೊಠಡಿಯ ಲಾಕರ್‌ನಲ್ಲಿದ್ದ ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 5 ಸಾವಿರ ರೂ. ನಗದು ಕಳವಾಗಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆರೋಪಿಗಳ ಪೈಕಿ ಬಂಟ್ವಾಳದ ಕೊಳ್ಳಾಡು ನಿವಾಸಿ 21 ವರ್ಷದ ಮೊಹಮ್ಮದ್ ಮಿಸ್ಮಾ ಎಂಬಾತ ನವೆಂಬರ್ 11ರಂದು ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ಬಳಿಕ ಹೆಚ್ಚಿನ ತನಿಖೆಗಾಗಿ ಪೊಲೀಸರು ಆತನನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದು, ಇತರ ಆರೋಪಿಗಳ ಪಾತ್ರ ಹಾಗೂ ಕಳವಾದ ಸೊತ್ತುಗಳ ಪತ್ತೆಗೆ ಕ್ರಮ ಮುಂದುವರಿಸಿದ್ದಾರೆ.