ಕಟ್ಟಡ ಕೆಡವುವ ಮುನ್ನ ಎಚ್ಚರ ! ಜಿಬಿಎ ಹೊಸ ನಿಯಮ ಜಾರಿ

0
9

ಬೆಂಗಳೂರು : ನಗರದ ಸ್ವಚ್ಛತೆ ಹಾಗೂ ಸೌಂದರ್ಯ ಕಾಪಾಡುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಟ್ಟಡ ಅವಶೇಷಗಳ ವಿಲೇವಾರಿಗೆ ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಇನ್ನು ಮುಂದೆ ಮನೆ ಅಥವಾ ಕಟ್ಟಡವನ್ನು ಕೆಡವುವ (ಡೆಮಾಲಿಷನ್) ಮುನ್ನ ಮಾಲೀಕರು ಕಡ್ಡಾಯವಾಗಿ ನೋಂದಣಿ ಮಾಡಿಸಬೇಕಾಗುತ್ತದೆ.

ನಗರದ ವಿವಿಧ ಭಾಗಗಳಲ್ಲಿ ಕಟ್ಟಡ ತ್ಯಾಜ್ಯವನ್ನು ರಸ್ತೆ ಬದಿ, ಖಾಲಿ ಜಾಗ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಸುರಿಯುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಹೊಸ ನಿಯಮದ ಪ್ರಕಾರ, ಮನೆ ಅಥವಾ ಕಟ್ಟಡ ಡೆಮಾಲಿಷನ್ ಮಾಡುವವರು ಸಂಬಂಧಪಟ್ಟ ಪ್ರಾಧಿಕಾರದಲ್ಲಿ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಬೇಕು. ನಂತರವೇ ಕಟ್ಟಡ ಅವಶೇಷಗಳನ್ನು ನಿಗದಿತ ಸ್ಥಳಗಳಿಗೆ ಸಾಗಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು.

ನೋಂದಣಿ ಮಾಡಿಸದೆ ಅಥವಾ ಕಟ್ಟಡದ ಅವಶೇಷಗಳನ್ನು ಎಲ್ಲೆಂದರಲ್ಲಿ ಸುರಿದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಎಂದು ಜಿಬಿಎ ಅಧಿಕಾರಿಗಳು ತಿಳಿಸಿದ್ದಾರೆ.

ನಗರದ ಸೌಂದರ್ಯ ಕಾಪಾಡುವುದು, ಪರಿಸರ ಮಾಲಿನ್ಯ ತಡೆಯುವುದು ಹಾಗೂ ಕಟ್ಟಡ ತ್ಯಾಜ್ಯದ ವೈಜ್ಞಾನಿಕ ನಿರ್ವಹಣೆಯನ್ನು ಖಚಿತಪಡಿಸುವ ಉದ್ದೇಶದಿಂದ ಈ ಹೊಸ ನಿಯಮ ಜಾರಿಗೆ ತರಲಾಗುತ್ತಿದ್ದು, ಶೀಘ್ರದಲ್ಲೇ ಇದರ ಕುರಿತು ಅಧಿಕೃತ ಮಾರ್ಗಸೂಚಿ ಪ್ರಕಟವಾಗುವ ನಿರೀಕ್ಷೆಯಿದೆ.