ಬಂಟ್ವಾಳ : ವಿದ್ಯಾಗಿರಿ ಬಂಟ್ವಾಳದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ 17ರಂದು ಶಾರದಾ ಪೂಜೆಯನ್ನು ಭಕ್ತಿ ಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ವಿದ್ಯೆಯ ಅಧಿದೇವತೆಯಾದ ಶ್ರೀ ಶಾರದಾ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಶುಭಾರಂಭ ಮಾಡಲಾಯಿತು. ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಭಕ್ತಿಯಿಂದ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ, ಜ್ಞಾನಾರ್ಜನೆ ಹಾಗೂ ಉಜ್ವಲ ಭವಿಷ್ಯ ಲಭಿಸಲಿ ಎಂದು ಪ್ರಾರ್ಥಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಆಯುಧ ಪೂಜೆ ಹಾಗೂ ವಾಹನ ಪೂಜೆಯನ್ನು ನೆರವೇರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಹರಿಪ್ರಸಾದ್, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಚೈತ್ರ ಶೆಟ್ಟಿ ಹಾಗೂ ಪೂರ್ವಪ್ರಾಥಮಿಕ ವಿಭಾಗದ ಸಂಯೋಜಕಿ ವೀಣಾ ದೇವಾಡಿಗ ಉಪಸ್ಥಿತರಿದ್ದರು.
ಧಾರ್ಮಿಕ ವಾತಾವರಣದಲ್ಲಿ ನಡೆದ ಕಾರ್ಯಕ್ರಮದ ಕೊನೆಯಲ್ಲಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಕ್ತಿಭಾವದಿಂದ ಭಾಗವಹಿಸುವ ಮೂಲಕ ಶಾರದಾ ಪೂಜೆಯ ಸಂಭ್ರಮಕ್ಕೆ ಮೆರುಗು ನೀಡಿದರು.

