ಆರೋಗ್ಯಕರ ಸಮಾಜಕ್ಕೆ ಆಹಾರ ಪದ್ಧತಿಯಲ್ಲಿ ಬದಲಾವಣೆ ಅಗತ್ಯ: ಯು.ಟಿ. ಖಾದರ್

0
22

ಮಂಗಳೂರು : ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರು ತಮ್ಮ ಆಹಾರ ಪದ್ಧತಿ ಹಾಗೂ ಜೀವನಶೈಲಿಯಲ್ಲಿ ಸೂಕ್ತ ಬದಲಾವಣೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಕರೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆಯುಷ್ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಆಧುನಿಕ ಜೀವನಶೈಲಿಯಲ್ಲಿ ಜನರು ನಾಲಿಗೆಯ ರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದರು.

ಆಹಾರವು ಕೇವಲ ರುಚಿಗಾಗಿ ಮಾತ್ರವಲ್ಲದೆ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸಿ ಉತ್ತಮ ಆರೋಗ್ಯ ಕಾಪಾಡುವಂತಿರಬೇಕು. ಪೌಷ್ಟಿಕಾಂಶಭರಿತ ಹಾಗೂ ಸಾಂಪ್ರದಾಯಿಕ ಆಹಾರ ಪದ್ಧತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದರು.

ಬಾಲ್ಯದಿಂದಲೇ ಪೌಷ್ಟಿಕ ಆಹಾರದ ಅಭ್ಯಾಸ ಬೆಳೆಸಿ

ಮಕ್ಕಳ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಯ ಹಂತದಲ್ಲಿ ಅಪೌಷ್ಟಿಕತೆ ಉಂಟಾಗದಂತೆ ತಾಯಂದಿರು ಬಾಲ್ಯದಿಂದಲೇ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಅಭ್ಯಾಸ ಬೆಳೆಸಬೇಕು. ಆರೋಗ್ಯಕರ ಆಹಾರ ಕ್ರಮವು ಸದೃಢ ಕುಟುಂಬ ಹಾಗೂ ಸಶಕ್ತ ಸಮಾಜ ನಿರ್ಮಾಣಕ್ಕೆ ಪ್ರಮುಖ ಅಡಿಪಾಯವಾಗಿದೆ ಎಂದು ಯು.ಟಿ. ಖಾದರ್ ಹೇಳಿದರು.

ಕಾರ್ಯಕ್ರಮದ ಅಂಗವಾಗಿ ಸಾಂಪ್ರದಾಯಿಕ ಸೀಮಂತ, ಮಕ್ಕಳ ಅನ್ನಪ್ರಾಶನ ಹಾಗೂ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಚ್ಯವನಪ್ರಾಶ ವಿತರಣೆ ನಡೆಯಿತು.

ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.