ಉಡುಪಿ : ಕಾಪುವಿನಿಂದ ಉಡುಪಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೂಡ್ಸ್ ಟೆಂಪೋ ವಾಹನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಕ್ಕಳನ್ನು ಕರೆದೊಯ್ಯುತ್ತಿರುವ ದೃಶ್ಯ ಕಟಪಾಡಿಯಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ಬದಲು ಗೂಡ್ಸ್ ಟೆಂಪೋದಲ್ಲಿ ಪ್ರಯಾಣ ಮಾಡಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕಾದ ಸಂದರ್ಭದಲ್ಲಿ ಸಂಭ್ರಮದ ಹೆಸರಿನಲ್ಲಿ ಅವರ ಜೀವದೊಂದಿಗೆ ಚೆಲ್ಲಾಟವಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಹೆಚ್ಚಿರುವುದರಿಂದ ಇಂತಹ ರೀತಿಯಲ್ಲಿ ಮಕ್ಕಳನ್ನು ಕರೆದೊಯ್ಯುವುದು ಅಪಾಯಕ್ಕೆ ಆಹ್ವಾನ ನೀಡಿದಂತಾಗುತ್ತದೆ. ಯಾವುದೇ ಅನಾಹುತ ಸಂಭವಿಸಿದರೆ ಮಕ್ಕಳ ಜೀವಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟವರು ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಮುಂದಿನ ದಿನಗಳಲ್ಲಿ ಚೌತಿ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಗೂಡ್ಸ್ ವಾಹನಗಳಲ್ಲಿ ಕರೆದೊಯ್ಯುವಂತಹ ಅಪಾಯಕಾರಿ ಪ್ರಯಾಣಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಮಕ್ಕಳನ್ನು ಗೂಡ್ಸ್ ವಾಹನದಲ್ಲಿ ಕರೆದೊಯ್ದ ಚಾಲಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

