ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು

0
614

ಮಂಗಳೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಪೊಲೀಸರಿಗೆ ಲಭ್ಯವಾಗಿದ್ದು, ಶೀಘ್ರ ಬಂಧಿಸಲಾಗುವುದು ಎಂದು ಎಡಿಜಿಪಿ ಆರ್ ಹಿತೇಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸುಹಾಸ್ ಶೆಟ್ಟಿ ಮೇಲೆ ದಾಳಿ ನಡೆಸಿ ಪರಾರಿಯಾದ ಆರೋಪಿಗಳು ಯಾರು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿದ್ದು, ಆರೋಪಿಗಳ ಬಂಧನಕ್ಕೆ ತಂಡ ರಚನೆ ಮಾಡಿದ್ದೇವೆ. ಕಾನೂನು ಕೈಗೆತ್ತಿಕೊಂಡವರ ಮೇಲೆ ಕಠಿಣ ಕಾನೂನು ರೀತಿ ಕ್ರಮ ಆಗಲಿದೆ ಎಂದಿದ್ದಾರೆ.
ಘಟನೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕದ ವಾತಾವರಣ ಇದ್ದು, ಪರಿಸ್ಥಿತಿ ನಿಭಾಯಿಸಲು ಇಲಾಖೆ ಸನ್ನದ್ದವಾಗಿದೆ. ಸಾವಿರಕ್ಕೂ ಹೆಚ್ಚು ಪೋಲೀಸರನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಜಿಲ್ಲೆಯಾದ್ಯಂತ ಸೆಕ್ಷನ್ ಜಾರಿಗೊಳಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶವಿಲ್ಲ ಎಂದು ಹಿತೇಂದ್ರ ಹೇಳಿದ್ದಾರೆ. ಜಿಲ್ಲೆಯ ಜನ ಯಾವುದೇ ವದಂತಿಗಳಿಗೆ ಕಿವಿ ಕೊಡದೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಗುರುವಾರ ರಾತ್ರಿ ಬಜೆ ಸಮೀಪ ಸುಹಾಸ್ ಶೆಟ್ಟಿ ಹಾಗೂ ಇತರ ಐದು ಮಂದಿ ಸ್ನೇಹಿತರು ಸಂಚರಿಸುತ್ತಿದ್ದ ಇನೋವಾ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ದಾಳಿಗೆ ಬಳಸಿದ್ದ ಮೀನಿನ ವಾಹನ, ಸ್ವಿಫ್ಟ್ ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುಹಾಸ್ ಶೆಟ್ಟಿಯ ಇನೋವಾ ಕಾರನ್ನು ಕೂಡಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಮಂಗಳೂರು ನಗರ ಪ್ರದೇಶಕ್ಕೆ ಸಂಬಂಧಪಟ್ಟಂತೆ ಮೇ 6ರವರೆಗೆ
ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್‌ ಆಯುಕ್ತ ಅನುಪಮ್ ಅಗರವಾಲ್ ಅವರು ಆದೇಶಿಸಿದ್ದು, ಇತ್ತ ಜಿಲ್ಲಾ ವ್ಯಾಪ್ತಿಯಲ್ಲೂ ಆತಂಕ ಇರುವುದರಿಂದ ಜಿಲ್ಲಾ ಎಸ್ಪಿ ಯತೀಶ್ ಎನ್ ಅವರ ಕೋರಿಕೆಯಂತೆ ಜಿಲ್ಲಾ ಎಸ್ಸಿ ವ್ಯಾಪ್ತಿಯಲ್ಲೂ ಮೇ 2 ರಿಂದ ಮೇ 5ರ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರು ಆದೇಶಿಸಿದ್ದಾರೆ.
ಈ ಮಧ್ಯೆ ಶುಕ್ರವಾರ ಮುಂಜಾನೆ ಕೆಲವೆಡೆ ಬಸ್ಸಿಗೆ ಕಲ್ಲು ತೂರಾಟ, ಹಲ್ಲೆ ಪ್ರಕರಣಗಳು ವರದಿಯಾಗಿದ್ದು, ಕೆಲವೆಡೆ ಬಲವಂತದ ಬಂದ್ ಮಾಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಶುಕ್ರವಾರ ಜಿಲ್ಲಾ ಬಂದ್ ಮಾಡಲು ಕರೆ ನೀಡಿದೆ.

LEAVE A REPLY

Please enter your comment!
Please enter your name here