ಮಂಗಳೂರು ದಸರಾ ಮಹೋತ್ಸವಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

0
28

ಮಂಗಳೂರು: ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದ ಪ್ರತೀಕವಾಗಿರುವ ಐತಿಹಾಸಿಕ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವ-2026 ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅ.11ರಿಂದ 22ರವರೆಗೆ ವೈಭವದಿಂದ ನಡೆಯಲಿದೆ. ಅ.12ರಂದು ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರು ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಕ್ಷೇತ್ರದ ನವೀಕರಣದ ರೂವಾರಿ ಹಾಗೂ ಮಾಜಿ ಕೇಂದ್ರ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ದಸರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕುದ್ರೋಳಿ ಕ್ಷೇತ್ರದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕ್ಷೇತ್ರದ ಆವರಣದಲ್ಲಿ ಈ ಬಾರಿ ಅರಮನೆ ಮಾದರಿಯಲ್ಲಿ ಸುಂದರವಾದ ದರ್ಬಾರ್ ಮಂಟಪವನ್ನು ನಿರ್ಮಿಸಲಾಗಿದ್ದು, ಶ್ರೀ ಮಹಾಗಣಪತಿ, ಶ್ರೀ ಆದಿಶಕ್ತಿ, ನವದುರ್ಗೆಯರು ಹಾಗೂ ಶ್ರೀ ಶಾರದಾ ಮಾತೆಯ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತದೆ.

ಅ.11ರಂದು ವೈದಿಕ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಲಿದ್ದು, ಮಧ್ಯಾಹ್ನ ಶ್ರೀ ಶಾರದಾ ಮಾತೆ ಹಾಗೂ ನವದುರ್ಗೆಯರ ವಿಗ್ರಹಗಳ ಪ್ರತಿಷ್ಠಾಪನೆ ನಡೆಯಲಿದೆ. ಅ.12ರಿಂದ 20ರವರೆಗೆ ಪ್ರತಿದಿನ ಬೆಳಗ್ಗೆ 8.30ಕ್ಕೆ ಚಂಡಿಕಾಹೋಮ ನಡೆಯಲಿದೆ. ಅ.17ರಂದು ವಿಶೇಷ ಸಾಮೂಹಿಕ ಚಂಡಿಕಾಹೋಮ ಆಯೋಜಿಸಲಾಗಿದ್ದು, ಬೆಳಗ್ಗೆ 11.30ಕ್ಕೆ ಪೂರ್ಣಾಹುತಿ ನೆರವೇರಲಿದೆ.

ದಸರಾ ಮಹೋತ್ಸವದ ಅಂಗವಾಗಿ ಭಜನೆ, ಸಂಗೀತ, ನೃತ್ಯ, ಜಾನಪದ ಕಲೆಗಳು, ಕ್ರೀಡಾ ಸ್ಪರ್ಧೆಗಳು ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅ.12ರಂದು ರಾಜ್ಯಮಟ್ಟದ ದಸರಾ ಕವಿಗೋಷ್ಠಿ, ಕಥೆ ಹಾಗೂ ಕವನ ಸ್ಪರ್ಧೆಗಳು ನಡೆಯಲಿವೆ. ಅ.13ರಂದು ‘ರುದ್ರತಾಂಡವಂ’ ರಾಜ್ಯಮಟ್ಟದ ಭಕ್ತಿಗೀತೆಯ ಸಮೂಹ ನೃತ್ಯ ಸ್ಪರ್ಧೆ ಆಯೋಜಿಸಲಾಗಿದೆ.

ಅ.15ರಂದು ಮಕ್ಕಳ ದಸರಾ, ಅ.16ರಂದು ‘ಮುದ್ದು ಶಾರದೆ’ ಸ್ಪರ್ಧೆ, ಅ.18ರಂದು ದಸರಾ ಮ್ಯಾರಥಾನ್ ಹಾಗೂ ‘ಕಿನ್ನಿಪಿಲಿ’ ಕಾರ್ಯಕ್ರಮ ನಡೆಯಲಿದೆ. ಅ.19ರಂದು ಮಹಿಳಾ ದಸರಾ ಆಯೋಜಿಸಲಾಗಿದ್ದು, ವಿವಿಧ ಸ್ಪರ್ಧೆಗಳು ಹಾಗೂ ಗರ್ಭಾ-ದಾಂಡಿಯಾ ನೃತ್ಯ ಕಾರ್ಯಕ್ರಮ ನಡೆಯಲಿದೆ. ಅ.20ರಂದು ‘ದಸರಾ ರಂಗಾಂತರಂಗ’ದಡಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ. ಇದೇ ದಿನ ಬೆಳಗ್ಗೆ ಶಾರದಾ ಮಾತೆಯ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವೂ ನಡೆಯಲಿದೆ.

ಮಂಗಳೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಐತಿಹಾಸಿಕ ದಸರಾ ಶೋಭಾಯಾತ್ರೆ ಅ.21ರಂದು ಸಂಜೆ 4 ಗಂಟೆಗೆ ಕುದ್ರೋಳಿ ಕ್ಷೇತ್ರದಿಂದ ಆರಂಭಗೊಳ್ಳಲಿದೆ. ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಗಳೊಂದಿಗೆ ವಿವಿಧ ಸ್ತಬ್ಧಚಿತ್ರಗಳು, ಕಲಾ ತಂಡಗಳು ಹಾಗೂ ಸಾಂಸ್ಕೃತಿಕ ಪ್ರದರ್ಶನಗಳು ಶೋಭಾಯಾತ್ರೆಯ ಮೆರುಗು ಹೆಚ್ಚಿಸಲಿವೆ.