ಕಾರ್ಕಳ ತಾಲೂಕು ಕಚೇರಿಯಲ್ಲಿ ಮಹಿಳಾ ಸಿಬ್ಬಂದಿ ಸುರಕ್ಷತೆ ಪ್ರಶ್ನೆ : ನಿಷ್ಪಕ್ಷಪಾತ ತನಿಖೆಗೆ ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಆಗ್ರಹ

0
10

ಕಾರ್ಕಳ : ತಾಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಮಹಿಳಾ ಸಿಬ್ಬಂದಿಯೊಂದಿಗೆ ತಹಶೀಲ್ದಾರರ ವರ್ತನೆ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೂ ದೂರು ಸಲ್ಲಿಸಲಾಗಿದೆ ಎಂಬ ಮಾಹಿತಿ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಬಂದಿದೆ.

ಮಹಿಳಾ ಸಿಬ್ಬಂದಿ ಕಿರುಕುಳ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳನ್ನು ಮಾಡಿರುವುದಾಗಿ ತಿಳಿದುಬಂದಿದ್ದು, ಈ ಆರೋಪಗಳ ಸತ್ಯಾಸತ್ಯತೆಯನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸ್ಪಷ್ಟಪಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಆಗ್ರಹಿಸಿದ್ದಾರೆ.

ದೂರುಗಳು ಸಲ್ಲಿಕೆಯಾಗಿದ್ದರೆ ಅವುಗಳ ಕುರಿತು ಸಮರ್ಪಕ ತನಿಖೆ ನಡೆದಿದೆಯೇ? ಆರೋಪಗಳ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿದೆಯೇ? ಎಂಬುದನ್ನು ಜಿಲ್ಲಾಡಳಿತ ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷಿತ, ಗೌರವಯುತ ಹಾಗೂ ಭಯಮುಕ್ತ ವಾತಾವರಣ ಕಲ್ಪಿಸುವುದು ಆಡಳಿತದ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು. ದೂರು ನೀಡಿರುವ ಮಹಿಳೆಯರ ಗೌಪ್ಯತೆ ಮತ್ತು ಗೌರವವನ್ನು ಕಾಪಾಡಬೇಕು. ಆರೋಪಗಳು ಸಾಬೀತಾದಲ್ಲಿ ಕಾನೂನು ಹಾಗೂ ಇಲಾಖಾ ನಿಯಮಗಳ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಮಿತಾ ಸೂರ್ಯವಂಶಿ ಆಗ್ರಹಿಸಿದ್ದಾರೆ.

“ಮಹಿಳೆಯರ ಸುರಕ್ಷತೆಯಲ್ಲಿ ಯಾವುದೇ ರಾಜಿ ಇರಬಾರದು. ನ್ಯಾಯ ಸಿಗಲಿ, ಸತ್ಯ ಹೊರಬರಲಿ” ಎಂದು ಹೇಳಿದ್ದಾರೆ.