ಮಂಗಳೂರು : ನಿಟ್ಟೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ವಿನಯ ಹೆಗ್ಡೆ ಅವರ ನಿಧನಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ. ವಿನಯ ಹೆಗ್ಡೆ ಅವರು ತುಳು ಭಾಷೆ ಹಾಗೂ ಸಂಸ್ಕೃತಿಯ ಅತ್ಯಂತ ದೊಡ್ಡ ಪ್ರೋತ್ಸಾಹಕರಾಗಿದ್ದು, ತುಳುನಾಡಿನ ಸಾಂಸ್ಕೃತಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳಿಗೆ ಅವರು ನಿರಂತರವಾಗಿ ಬೆಂಬಲ ಮತ್ತು ಪ್ರೋತ್ಸಾಹ ನೀಡಿದ್ದರು ಎಂದು ತಾರಾನಾಥ್ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.
ಜಿಲ್ಲೆ ಹಾಗೂ ಹೊರಜಿಲ್ಲೆಗಳ ವಿವಿಧ ತುಳು ಸಂಘ–ಸಂಸ್ಥೆಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಿ ತುಳು ಭಾಷೆಯ ವಿಸ್ತರಣೆಗೆ ಶ್ರಮಿಸಿದವರು ಡಾ. ವಿನಯ ಹೆಗ್ಡೆ. ನಿಟ್ಟೆ ವೈದ್ಯಕೀಯ ಸಂಸ್ಥೆಯಲ್ಲಿ ತುಳು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ತುಳು ಭಾಷೆ ಹಾಗೂ ಸಂಸ್ಕೃತಿಯ ಅಧ್ಯಯನ ಮತ್ತು ಸಂರಕ್ಷಣೆಗೆ ಮಹತ್ವದ ಪಾತ್ರ ವಹಿಸಿದ್ದರು. ಇದು ತುಳು ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಅನನ್ಯ ಸೇವೆಯಾಗಿದೆ ಎಂದು ಅವರು ಸಂತಾಪ ಸಂದೇಶದಲ್ಲಿ ಸ್ಮರಿಸಿದ್ದಾರೆ.
ಡಾ. ವಿನಯ ಹೆಗ್ಡೆ ಅವರ ನಿಧನವು ತುಳು ಭಾಷೆ–ಸಂಸ್ಕೃತಿ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದ್ದು, ಅವರ ಸೇವೆಯನ್ನು ತುಳುನಾಡು ಸದಾ ನೆನಪಿಸಿಕೊಳ್ಳಲಿದೆ ಎಂದು ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದ್ದಾರೆ.
