ಕುಂಬಾರ ಸಮುದಾಯದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಯ ಉದ್ದೇಶದಿಂದ ಕರ್ನಾಟಕ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮದ ಮೂಲಕ 2026-27ನೇ ಸಾಲಿನ ವಿವಿಧ ಕಲ್ಯಾಣ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಇನ್ನಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಕಾರ್ಕಳ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಮಾಜಿ ಅಧ್ಯಕ್ಷರಾದ ಕುಶ.ಆರ್. ಮೂಲ್ಯ ಇನ್ನಾ ತಿಳಿಸಿದ್ದಾರೆ.
ಚುನಾವಣೆ ಪೂರ್ವದಲ್ಲಿ ಕುಂಬಾರ ಸಮುದಾಯಕ್ಕೆ ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ಇದೀಗ ಅದರ ಮೂಲಕ ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುತ್ತಿರುವುದು ಸಮುದಾಯದ ಪ್ರಗತಿಗೆ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ನಿಗಮದ ವತಿಯಿಂದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಆರಂಭಿಸಲು ಹಾಗೂ ವಾಹನ ಖರೀದಿಸಲು ಗರಿಷ್ಠ ₹1.20 ಲಕ್ಷದವರೆಗೆ ಆರ್ಥಿಕ ನೆರವು ನೀಡುವ ಯೋಜನೆ ಸಮುದಾಯದ ಯುವಜನರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಲಿದೆ. ಅದೇ ರೀತಿ CET ಮತ್ತು NEET ಮೂಲಕ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಸೌಲಭ್ಯ ಕಲ್ಪಿಸಿರುವುದು ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಲಿದೆ.
ಕೇವಲ ನಿಗಮ ಸ್ಥಾಪನೆಗೆ ಸೀಮಿತವಾಗದೆ, ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮ ಅಭಿನಂದನೀಯ. ಇದು ಕುಂಬಾರ ಸಮುದಾಯದ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವುದರ ಜೊತೆಗೆ, ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ ಎಂದು ತಿಳಿಸಿದ್ದಾರೆ.
ಆದ್ದರಿಂದ ಸಮುದಾಯದ ಅರ್ಹ ಫಲಾನುಭವಿಗಳು 2026-27ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಸದುಪಯೋಗ ಪಡೆದುಕೊಳ್ಳಬೇಕು. ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿ ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕರ್ನಾಟಕ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶ್ರೀನಿವಾಸ್ ವೇಲು ಅವರಿಗೆ ಕುಂಬಾರ ಸಮುದಾಯದ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಕುಶ.ಆರ್. ಮೂಲ್ಯ ಇನ್ನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

