ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ಧರ್ಮೇಂದ್ರ ಪ್ರಧಾನ್ ಪ್ರತಿಕೃತಿ ದಹನ

0
45

ಬೆಳ್ತಂಗಡಿ : ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ, ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಂಧನವನ್ನು ಖಂಡಿಸಿ ಬೆಳ್ತಂಗಡಿಯ ಮೂರು ಮಾರ್ಗ ಜಂಕ್ಷನ್‌ನಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, “ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಅಕ್ಷಮ್ಯ ಅಪರಾಧವಾಗಿದೆ. ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ದೌರ್ಜನ್ಯ ನಡೆದಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು. ಮುಂದಿನ ದಿನಗಳಲ್ಲಿ ಹಳ್ಳಿಯಿಂದ ದಿಲ್ಲಿಯವರೆಗೆ ಹೋರಾಟವನ್ನು ತೀವ್ರಗೊಳಿಸಲಾಗುವುದು” ಎಂದು ಹೇಳಿದರು.

ಪ್ರತಿಕೃತಿ ದಹಿಸಿ ಆಕ್ರೋಶ

ಪ್ರತಿಭಟನೆಯ ವೇಳೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪ್ರತಿಕೃತಿಯನ್ನು ದಹಿಸಿ, ಟಯರ್‌ಗೆ ಬೆಂಕಿ ಹಚ್ಚುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಯುವ ಕಾಂಗ್ರೆಸ್ ಕಾರ್ಯಕರ್ತರು ಕೆಲಕಾಲ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ ಪರಿಣಾಮ ವಾಹನ ಸಂಚಾರದಲ್ಲಿ ಅಸ್ತವ್ಯಸ್ತತೆ ಉಂಟಾಯಿತು. ರಸ್ತೆ ತಡೆ ತೆರವುಗೊಳಿಸಲು ಪೊಲೀಸರು ಮುಂದಾದ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಪ್ರತಿಭಟನೆಯಲ್ಲಿ ಕೆಪಿಸಿಸಿ ವಕ್ತಾರ ಅಮೃತ್ ಶೆಣೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಮಿತಾ, ಕೆಪಿಸಿಸಿ ಕಾರ್ಯದರ್ಶಿ ಪ್ರವೀಣ್ ಹಳ್ಳಿಮನೆ, ಯುವ ಕಾಂಗ್ರೆಸ್ ಮುಖಂಡ ಹಕೀಂ ಕೊಕ್ಕಡ ಸೇರಿದಂತೆ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್‌ನ ಹಲವು ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.