ಮಂಗಳೂರು: ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಭಾರಿ ಮಳೆಯಿಂದಾಗಿ ಹಲವೆಡೆ ಅವಾಂತರಗಳೇ ಸೃಷ್ಟಿಯಾಗಿವೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರಿ ವರ್ಷಧಾರೆಯಾಗಿದ್ದು, ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿಯೇ ಬೃಹತ್ ಮರ ಬಿದ್ದಿದೆ. ಶೃಂಗೇರಿ ತಾಲೂಕಿನ ಕೆರೆಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಬುಧವಾರ ಕಿಲೋಮೀಟರ್ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನಗಳು ನಿಂತಲ್ಲೇ ನಿಂತು ಸವಾರರು ಪರದಾಟ ಪಡುವಂತಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಶಾಲೆ ಕಾಲೇಜು ರಜೆ
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಸುಳ್ಯ, ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುಗಳವರೆಗೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು: ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ
ಚಿಕ್ಕಮಗಳೂರು, ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ, ಎನ್ಆರ್ ಪುರ, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನಾದ್ಯಂತ ಮಳೆಯಾದ ಪರಿಣಾಮ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಜೋರಾಗಿದ್ದು, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಲ್ಲೂ ಶಾಲಾ ಕಾಲೇಜಿಗೆ ರಜೆ
ಕೊಡಗು ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿಯೂ ಶಾಲೆ ಕಾಲೇಜಿಗೆ ರಜೆ
ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಹೊಸನಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.