ಉಚ್ಚಿಲದಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ | ಪಂಚ ಗ್ಯಾರಂಟಿ ಸಂಭ್ರಮೋತ್ಸವ ಯಶಸ್ವಿ

0
16

ಪಂಚ ಗ್ಯಾರಂಟಿ ಯೋಜನೆಗಳು ಸ್ವಾವಲಂಬಿ ಬದುಕಿಗೆ ಶಕ್ತಿ ತುಂಬುವ ಜನಪರ ಕಾರ್ಯಕ್ರಮಗಳು : ಸುಧೀರ್ ಕುಮಾರ್ ಮುರೊಳ್ಳಿ

ಪಡುಬಿದ್ರಿ : ಕೇಂದ್ರ ಸರಕಾರ ಜನರಿಗೆ ನೀಡಿದ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದು, ಮಾತು ಕೊಟ್ಟು ಜನರನ್ನು ಮರಳು ಮಾಡಿದೆ. ಆದರೆ ರಾಜ್ಯದ ಕಾಂಗ್ರೆಸ್ ಸರಕಾರ ಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಬದುಕಿಗೆ ಆಸರೆಯಾಗಿದೆ ಎಂದು ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದರು.

ಉಚ್ಚಿಲ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ನವೆಂಬರ್ 22ರಂದು ಉಚ್ಚಿಲದಲ್ಲಿ ಆಯೋಜಿಸಿದ್ದ ಪಂಚ ಗ್ಯಾರಂಟಿ ಸಂಭ್ರಮೋತ್ಸವದಲ್ಲಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಗಳು ಕೇವಲ ಉಚಿತ ಸೌಲಭ್ಯಗಳನ್ನು ನೀಡುವ ಕಾರ್ಯಕ್ರಮಗಳಲ್ಲ. ಬದಲಾಗಿ ಬಡವರು, ಮಧ್ಯಮ ವರ್ಗದವರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಜೀವನಮಟ್ಟ ಸುಧಾರಿಸುವ, ಆರ್ಥಿಕ ಹೊರೆ ಕಡಿಮೆ ಮಾಡುವ ಮತ್ತು ಸ್ವಾವಲಂಬಿ ಬದುಕಿಗೆ ಶಕ್ತಿ ತುಂಬುವ ಜನಪರ ಯೋಜನೆಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.

ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಮಾತನಾಡಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ನೆರವಾಗಿದ್ದು, ಜನಸಾಮಾನ್ಯರ ಬದುಕಿನಲ್ಲಿ ಹೊಸ ಭರವಸೆ ಮೂಡಿಸಿವೆ ಎಂದರು.

ಗ್ರಾಮೀಣ ಕಾಂಗ್ರೆಸ್ ಸಮಿತಿ ಉಚ್ಚಿಲದ ಅಧ್ಯಕ್ಷ ಸುಕುಮಾರ್ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

ಇದೇ ಸಂದರ್ಭದಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೆಸ್ಕಾಂ ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನಚಂದ್ರ ಸುವರ್ಣ ಅಡ್ವೆ , ಕೆಪಿಸಿಸಿ ಸಂಯೋಜಕರಾದ ನವೀನ್‌ಚಂದ್ರ ಜೆ. ಶೆಟ್ಟಿ, ಹರಿಪ್ರಸಾದ್ ರೈ, ಅಬ್ದುಲ್ ಅಝೀಝ್ ಹೆಜಮಾಡಿ, ದೀಪಕ್ ಎರ್ಮಾಳು, ಯು.ಸಿ. ಶೇಕಬ್ಬ, ಗಣೇಶ್ ಆಚಾರ್ಯ ಉಚ್ಚಿಲ, ಧೀರಜ್ ಹುಸೈನ್, ಅಶೋಕ್ ಸಾಲ್ಯಾನ್, ರಿಯಾಝ್ ಮುದರಂಗಡಿ, ಫಾರೂಕ್ ಚಂದ್ರನಗರ, ದೀವ್ ರಫೀಕ್, ಸತೀಶ್ ದೇಜಾಡಿ ಉಪಸ್ಥಿತರಿದ್ದರು.

ಗ್ಯಾರಂಟಿ ಸಮಿತಿಯ ಸದಸ್ಯರಾದ ಹಸನ್ ಬಾವಾ, ಕೀರ್ತಿ ಕುಮಾರ್, ರೀನಾ ವಿನುತಾ ಡಿಸೋಜ, ರಶ್ಮಿ ಎರ್ಮಾಳು ಮತ್ತಿತರರು ಭಾಗವಹಿಸಿದ್ದರು. ಸಂತೋಷ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿ, ಸುಧಾಕರ ಕೆ. ವಂದಿಸಿದರು.