ಉಡುಪಿ: ಗ್ರಾಮೀಣ ಪ್ರದೇಶದ ಕಟ್ಟಕಡೆಯ ವ್ಯಕ್ತಿಗೂ ಆರ್ಥಿಕ ಶಕ್ತಿ ನೀಡುವ ಉದ್ದೇಶದಿಂದ ಸಾಮಾಜಿಕ ಕಳಕಳಿಯ ಚಿಂತನೆ ಇಟ್ಟುಕೊಂಡು ಸಹಕಾರಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರ ಜಿಲ್ಲೆಯ ಮೂರ್ತೆದಾರರ ಸಹಕಾರಿ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಆಯೋಜಿಸಿದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕರಾವಳಿ ಭಾಗದಲ್ಲಿ ಸಹಕಾರಿ ಕ್ಷೇತ್ರ ಬ್ಯಾಂಕಿಂಗ್ ವ್ಯವಹಾರಕ್ಕೆ ಮಾತ್ರ ತನ್ನ ಕಾರ್ಯವ್ಯಾಪ್ತಿಯನ್ನು ಸೀಮಿತಗೊಳಿಸಿದೆ. ಆದರೆ, ರಾಜ್ಯ ಬೇರೆ ಜಿಲ್ಲೆಗಳಲ್ಲಿ ಹಾಗೂ ಬೇರೆ ರಾಜ್ಯಗಳಲ್ಲಿ ವ್ಯವಹಾರಿಕವಾಗಿ ಅನೇಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಿದರು.
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಹರೀಶ್ ಕಿಣಿ ಅಲೆವೂರು, ವೈ. ಸುಧೀರ್ ಕುಮಾರ್, ಮೂರ್ತೆದಾರರ ಜಿಲ್ಲಾ ಮಹಾಮಂಡಳದ ಉಪಾಧ್ಯಕ್ಷ ವಿಠಲ ಪೂಜಾರಿ, ಪ್ರಾಧ್ಯಾಪಕ ಸಂತೋಷ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಾಹಕಿ ಅನುಷಾ ಕೋಟ್ಯಾನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

