ನಂದಿನಿ ಡೇರಿ ಸಂಪರ್ಕ ರಸ್ತೆಯಲ್ಲಿ ಬಿರುಕು : ಭಾರೀ ಅನಾಹುತದ ಭೀತಿ, ತಕ್ಷಣ ದುರಸ್ತಿಗೆ ಆಗ್ರಹ

0
7

ಬ್ರಹ್ಮಾವರ : ಉಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿನಿ ಡೇರಿಗೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಭಾರೀ ಬಿರುಕು ಕಾಣಿಸಿಕೊಂಡಿದ್ದು, ಸಾರ್ವಜನಿಕರು ಮತ್ತು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ರಸ್ತೆಯ ಮಧ್ಯಭಾಗದಲ್ಲಿ ದೊಡ್ಡ ಮಟ್ಟದ ಬಿರುಕು ಉಂಟಾಗಿರುವುದರ ಜೊತೆಗೆ ರಸ್ತೆಯ ಎರಡೂ ಬದಿಗಳಲ್ಲೂ ಆಳವಾದ ಕಂದಕಗಳು ನಿರ್ಮಾಣವಾಗಿವೆ. ಕಳೆದ ಒಂದು ವರ್ಷದಿಂದ ಈ ಸಮಸ್ಯೆ ಮುಂದುವರಿದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಈ ಮಾರ್ಗದಲ್ಲಿ ಭಾರೀ ವಾಹನಗಳು ನಿರಂತರ ಸಂಚರಿಸುತ್ತಿರುವುದರಿಂದ ರಸ್ತೆ ಮತ್ತಷ್ಟು ಕುಸಿಯುವ ಭೀತಿ ಎದುರಾಗಿದೆ. ವಿಶೇಷವಾಗಿ ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆ ರಸ್ತೆ ಸಂಪೂರ್ಣವಾಗಿ ಎರಡು ಭಾಗವಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

ಭಾರೀ ವಾಹನಗಳ ಸಂಚಾರದಿಂದ ರಸ್ತೆಯ ಬಿರುಕು ಬಿಟ್ಟ ಭಾಗವು ತನ್ನ ಸಾಮರ್ಥ್ಯ ಕಳೆದುಕೊಂಡಿದ್ದು, ಯಾವುದೇ ಕ್ಷಣದಲ್ಲಿ ದೊಡ್ಡ ಅನಾಹುತ ಸಂಭವಿಸಬಹುದಾಗಿದೆ. ಆದ್ದರಿಂದ ತಕ್ಷಣವೇ ಈ ರಸ್ತೆಯಲ್ಲಿ ಘನ ವಾಹನಗಳ ಸಂಚಾರ ನಿಷೇಧಿಸಿ, ಹಾನಿಗೊಳಗಾದ ಭಾಗವನ್ನು ದುರಸ್ತಿ ಮಾಡಿ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ, ತುಳುನಾಡು ರಕ್ಷಣೆ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಶೆಟ್ಟಿ ನಡುಮನೆ, ರಿಕ್ಷಾ ಚಾಲಕ ರೋಷನ್ ಡಿಸೋಜ ಅಮುಂಜೆ ಹಾಗೂ ಸ್ಥಳೀಯ ಸಾರ್ವಜನಿಕರು ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸ್ಥಳೀಯ ಪಂಚಾಯಿತಿ ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here