ಪರೀಕ್ಷಾ ಅಕ್ರಮಕ್ಕೆ ಬ್ರೇಕ್: ದೇಶದ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಮೋದಿ ಬಿಗಿ ಕ್ರಮ

0
29

ನವದೆಹಲಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಲು ಮಹತ್ವದ ನಿರ್ಧಾರ ಘೋಷಿಸಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯವನ್ನು ಸುರಕ್ಷಿತಗೊಳಿಸುವ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ವಿಶ್ವಾಸಾರ್ಹ ಮತ್ತು ಪಾರದರ್ಶಕಗೊಳಿಸುವ ಉದ್ದೇಶದಿಂದ, ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್‌ಫೋರ್ಸ್ (ಕಾರ್ಯಪಡೆ) ರಚಿಸಲಾಗುವುದು ಎಂದು ಪ್ರಧಾನಿ ಮೋದಿ ವಿಡಿಯೋ ಸಂದೇಶದ ಮೂಲಕ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಮಾತನಾಡಿ, “ಭಾರತ ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷಾ ಅಕ್ರಮ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯಗಳ ಸ್ಥಾಪನೆ ಹಾಗೂ ಕಠಿಣ ಕಾನೂನು ಜಾರಿಗೆ ಕ್ರಮವಹಿಸಲಾಗಿದೆ. ಆದರೆ ಭವಿಷ್ಯದ ಪರೀಕ್ಷಾ ವ್ಯವಸ್ಥೆ ತಂತ್ರಜ್ಞಾನ ಆಧಾರಿತ, ಪಾರದರ್ಶಕ ಹಾಗೂ ವಿಶ್ವಾಸಾರ್ಹವಾಗಿರಬೇಕು. ಈ ಹಿನ್ನೆಲೆಯಲ್ಲಿ ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ ರಚಿಸಲು ನಿರ್ಧರಿಸಿದ್ದೇವೆ,” ಎಂದು ಹೇಳಿದರು.

ಅವರು ಮುಂದುವರಿದು, “ಈ ಕಾರ್ಯಪಡೆ ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳನ್ನು ಪರಿಶೀಲಿಸಿ ಅಗತ್ಯ ಸುಧಾರಣೆಗಳ ಕುರಿತು ಶಿಫಾರಸು ಸಲ್ಲಿಸಲಿದೆ. ಅದರ ವರದಿಯ ಆಧಾರದ ಮೇಲೆ ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಭದ್ರತೆ, ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ,” ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಈ ನಿರ್ಧಾರವು ನೀಟ್ ಸೇರಿದಂತೆ ರಾಷ್ಟ್ರಮಟ್ಟದ ಪ್ರವೇಶ ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗುತ್ತಿದೆ.