ಮಣಿಪಾಲ : ಮನೆಯ ಹೊರಜಗುಲಿಯ ಮೇಲಿರುವ ಪಕ್ಕಾಸಿಗೆ ಬಟ್ಟೆಯಿಂದ ನೇಣು ಬಿಗಿದುಕೊಂಡು ಕೂಲಿಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ 80 ಬಡಗುಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಳ ಶಾಂತಿನಗರದ ಎರಡನೇ ತಿರುವಿನ ಬಳಿ ನಡೆದಿದೆ.
ಮೃತರನ್ನು ಸಂತೋಷ್ ಕುಮಾರ್ (56) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅವರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಮಣಿಪಾಲ ಪೊಲೀಸ್ ಠಾಣೆಯ ಎಎಸ್ಐ ಗಣೇಶ್ ಹಾಗೂ ಹೆಡ್ ಕಾನ್ಸ್ಟೆಬಲ್ ಸುಕುಮಾರ್ ಶೆಟ್ಟಿ ಭೇಟಿ ನೀಡಿ ಕಾನೂನು ಪ್ರಕ್ರಿಯೆಗಳನ್ನು ನಡೆಸಿದರು.
ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ನೇಣಿನ ಕುಣಿಕೆಯಿಂದ ಕೆಳಗಿಳಿಸಿ, ಮಣಿಪಾಲದಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

