ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ನಟ ದರ್ಶನ್ ಮತ್ತು ಗ್ಯಾಂಗ್‌ಗೆ ಸೆ.9ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. 24ನೇ ಎಸಿಎಂಎಂ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ.
ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ಮನವಿ ಪುರಸ್ಕರಿಸಿದ ನ್ಯಾಯಾಧೀಶರು ದರ್ಶನ್ ಮತ್ತು ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದರು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ರೌಡಿಶೀಟರ್‌ಗಳೊಂದಿಗೆ ಕುಳಿತುಕೊಂಡು ಸಿಗರೇಟ್ ಸೇದುತ್ತಿರುವ ಫೋಟೊ ವೈರಲ್ ಆದ ಬಳಿಕ, ಅವರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಬಗ್ಗೆ ಚರ್ಚೆ ನಡೆದಿತ್ತು. ಆ ಬಗ್ಗೆ ಪೊಲೀಸರು ಕೋರ್ಟಿನಿಂದ ಅನುಮತಿಯನ್ನೂ ಪಡೆದಿದ್ದಾರೆ. ಈ ನಿಟ್ಟಿನಲ್ಲಿ ಇಂದೇ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ ಎನ್ನಲಾಗಿದೆ. ತುಮಕೂರು, ಶಿರಾ ಮಾರ್ಗವಾಗಿ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ ಎಂದು ವರದಿಗಳಾಗಿವೆ.