ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ಎಲ್ಲ ವಾಹನಗಳನ್ನು ಪರಿಶೀಲಿಸಲಾಗುತ್ತಿದೆ. ಅದರಂತೆ ವಾಹನ ತಪಾಸಣೆ ವೇಳೆ ಚುನಾವಣಾ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಮೈಸೂರು ಜಿಲ್ಲೆಯ ಕೆ. ಆರ್. ನಗರ ತಾಲೂಕಿನ ತಿದ್ದೂರಿನಲ್ಲಿ ಈ ಘಟನೆ ನಡೆದಿದೆ. ಅಕ್ರಮ ಮದ್ಯ ಸಾಗಾಣಿಕೆ ತಡೆಗೆ ಇಲಾಖೆ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಬಂದ ಬೈಕೊಂದನ್ನು ತಡೆದು ತಪಾಸಣೆಗೆ ಮುಂದಾದ ಪೊಲೀಸ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ.
ಹಲ್ಲೆಗೊಳಗಾದ ಸಿಬ್ಬಂದಿಯನ್ನು ಸಂತೋಷ್ ಎಂದು ಗುರುತಿಸಲಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.