ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹೊರಡಿಸಿರುವ ಆದೇಶದ ವಿರುದ್ಧ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರೈತರು, ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಾರ್ವಜನಿಕ ಸಂಘಟನೆಗಳು ರಾಜ್ಯದ ಹಿತಾಸಕ್ತಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ಆರಂಭಿಸಿವೆ.
ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 2.30ಕ್ಕೆ ನವದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ತುರ್ತು ಸಭೆ ನಡೆಯಲಿದೆ. ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಹಾಗೂ ಪುದುಚೇರಿ ಪ್ರತಿನಿಧಿಗಳು ಭಾಗವಹಿಸಲಿದ್ದು, ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಕುರಿತು ಹೊರಡಿಸಿರುವ ಆದೇಶದ ಬಗ್ಗೆ ಸುದೀರ್ಘ ಚರ್ಚೆ ನಡೆಯುವ ಸಾಧ್ಯತೆಯಿದೆ. ಈ ಸಂಬಂಧ ಕರ್ನಾಟಕ ಸರ್ಕಾರಕ್ಕೂ ನೋಟಿಸ್ ಜಾರಿಯಾಗಿದೆ.
ರಾಜ್ಯದ ಜಲಾಶಯಗಳಲ್ಲಿನ ನೀರಿನ ಲಭ್ಯತೆ, ಮುಂಗಾರು ಮಳೆಯ ಪರಿಸ್ಥಿತಿ ಹಾಗೂ ರೈತರ ಹಿತಾಸಕ್ತಿಯನ್ನು ಆಧಾರವಾಗಿಟ್ಟುಕೊಂಡು ಕರ್ನಾಟಕ ಸರ್ಕಾರವು CWMA ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸಭೆಯಲ್ಲಿ ರಾಜ್ಯದ ಪರವಾಗಿ ಸಮರ್ಥ ಮತ್ತು ಪ್ರಬಲ ವಾದ ಮಂಡಿಸುವಂತೆ ಸೂಚನೆ ನೀಡಿದ್ದಾರೆ.
ಇನ್ನೊಂದೆಡೆ, ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಆದೇಶವನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಪಾಡುವಂತೆ ಆಗ್ರಹಿಸಿರುವ ಸಂಘಟನೆಗಳು, ಅಗತ್ಯವಿದ್ದರೆ ರಾಜ್ಯವ್ಯಾಪಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿವೆ.
ಈ ನಡುವೆ ಕರ್ನಾಟಕ ಬಂದ್‌ಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಶುಕ್ರವಾರ ಬೆಂಗಳೂರಿನ ವುಡ್‌ಲ್ಯಾಂಡ್ ಹೋಟೆಲ್‌ನಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯ ಬಂದ್ ದಿನಾಂಕ, ಹೋರಾಟದ ರೂಪುರೇಷೆ ಹಾಗೂ ಮುಂದಿನ ಹೋರಾಟದ ಕಾರ್ಯಕ್ರಮಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಕಾವೇರಿ ವಿವಾದದ ಹಿನ್ನೆಲೆಯಲ್ಲಿ ರಾಜ್ಯದ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಚಟುವಟಿಕೆಗಳು ಹೆಚ್ಚಾಗಿದ್ದು, ದೆಹಲಿಯಲ್ಲಿ ನಡೆಯಲಿರುವ CWMA ಸಭೆಯ ತೀರ್ಮಾನ ಹಾಗೂ ಕನ್ನಡಪರ ಸಂಘಟನೆಗಳ ಮುಂದಿನ ನಿರ್ಧಾರಗಳತ್ತ ರಾಜ್ಯದ ಜನರ ಗಮನ ಕೇಂದ್ರೀಕೃತವಾಗಿದೆ.

