ಹಿಂದೂ ಸಂಘಟನೆಯಿಂದ ಆರೋಪಿಗಳ ಬಂಧನಕ್ಕೆ ಆಗ್ರಹ
ಬಂಟ್ವಾಳ : ಜ್ಯೋತಿಷಿ ಹಾಗೂ ಆಧ್ಯಾತ್ಮಿಕ ಚಿಂತಕರಾದ ಅನಿಲ್ ಪಂಡಿತ್ ಬ್ರಹ್ಮರಕೂಟ್ಲು ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್‌ಗಳನ್ನು ಹರಿಬಿಡಲಾಗುತ್ತಿದೆ ಎಂದು ಆರೋಪಿಸಿ ಅವರು ಬಂಟ್ವಾಳ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅನಿಲ್ ಪಂಡಿತ್, ಕಳೆದ ಕೆಲವು ವರ್ಷಗಳಿಂದ ತಮ್ಮ ವಿರುದ್ಧ ನಿರಂತರವಾಗಿ ಅಪಪ್ರಚಾರ ನಡೆಸಲಾಗುತ್ತಿದ್ದು, ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಮಾನಹಾನಿಕರ ಸಂದೇಶಗಳನ್ನು ವೈರಲ್ ಮಾಡಿ ತಮ್ಮ ವೈಯಕ್ತಿಕ ಹಾಗೂ ಸಾಮಾಜಿಕ ಗೌರವಕ್ಕೆ ಧಕ್ಕೆ ತರುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು. ತಾವು ಹಲವು ವರ್ಷಗಳಿಂದ ಜಾತಿ, ಧರ್ಮ ಭೇದವಿಲ್ಲದೆ ಜನರಿಗೆ ಆಧ್ಯಾತ್ಮಿಕ ಮಾರ್ಗದರ್ಶನ ಹಾಗೂ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿದ್ದು, ತಮ್ಮ ಸೇವೆಯನ್ನು ದುರುದ್ದೇಶಪೂರ್ವಕವಾಗಿ ಅಪಪ್ರಚಾರದ ಮೂಲಕ ಕಳಂಕಿತಗೊಳಿಸಲು ಕೆಲವರು ಯತ್ನಿಸುತ್ತಿದ್ದಾರೆ ಎಂದು ಹೇಳಿದರು.

ಈ ಸಂಬಂಧ ಸೂಕ್ತ ತನಿಖೆ ನಡೆಸಿ, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಪ್ರಕಟಿಸಿರುವವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಅವರು ಮನವಿ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಮೂಲಕ ಇಂತಹ ದುಷ್ಪ್ರಚಾರಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
ಇನ್ನೊಂದೆಡೆ, ಅನಿಲ್ ಪಂಡಿತ್ ಅವರ ವಿರುದ್ಧದ ಅವಹೇಳನಕಾರಿ ಪೋಸ್ಟ್‌ಗಳನ್ನು ಹಿಂದೂ ಸಮಾಜ ತೀವ್ರವಾಗಿ ಖಂಡಿಸಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಕ್ರಮ ಕೈಗೊಳ್ಳದಿದ್ದರೆ ವಿವಿಧ ಹಿಂದೂ ಸಂಘಟನೆಗಳೊಂದಿಗೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ, ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷ ರೂಪೇಶ್ ಜ್ಯೋತಿಗುಡ್ಡೆ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ್, ಪ್ರಮುಖರಾದ ಸುದರ್ಶನ್ ಬಜ, ಅಶೋಕ್ ಶೆಟ್ಟಿ ಸರಪಾಡಿ, ತಾರನಾಥ್ ಕೊಟ್ಟಾರಿ, ದಾಮೋದರ್ ನೆಕ್ರೆಕೆರೆ, ನರಸಿಂಹ ಮಾಣಿ, ಹಿಂದೂ ಜನಜಾಗೃತಿ ಸಮಿತಿಯ ಕೀರ್ತೇಶ್, ವಿಜಯ್, ವಿಕಾಸ್, ದಯಾನಂದ ವಳಚೀಲ್ ಪದವು ಸೇರಿದಂತೆ ಹಲವರು ಉಪಸ್ಥಿತರಿದ್ದರು.

