ಜ್ಯೋತಿಷಿ ಅನಿಲ್ ಪಂಡಿತ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್ : ಆರೋಪಿಗಳ ಬಂಧನಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ

0
29

ಬಂಟ್ವಾಳ : ಖ್ಯಾತ ಜ್ಯೋತಿಷಿ ಹಾಗೂ ಆಧ್ಯಾತ್ಮಿಕ ಚಿಂತಕರಾದ ಶ್ರೀ ಅನಿಲ್ ಪಂಡಿತ್ ಬ್ರಹ್ಮರಕೂಟ್ಟು ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್‌ಗಳು ಪ್ರಕಟವಾಗಿರುವುದನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಪ್ರಕಟಣೆ ನೀಡಿರುವ ಹಿಂದೂ ಜಾಗರಣ ವೇದಿಕೆಯು, ಅನಿಲ್ ಪಂಡಿತ್ ಅವರು ಹಲವು ವರ್ಷಗಳಿಂದ ಸಮಾಜದ ವಿವಿಧ ವರ್ಗದ ಜನರಿಗೆ ಸೇವಾ ಮನೋಭಾವದಿಂದ ಜ್ಯೋತಿಷ್ಯ ಮಾರ್ಗದರ್ಶನ ಹಾಗೂ ಆಧ್ಯಾತ್ಮಿಕ ಸೇವೆಗಳನ್ನು ನೀಡುತ್ತಾ ಬಂದಿದ್ದು, ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ ಎಂದು ತಿಳಿಸಿದೆ.

ಕೆಲವು ದುಷ್ಕರ್ಮಿಗಳು ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ಶಕ್ತಿಗಳು ಉದ್ದೇಶಪೂರ್ವಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿ ತೇಜೋವಧೆಗೆ ಯತ್ನಿಸುತ್ತಿವೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಶ್ರೀ ಅನಿಲ್ ಪಂಡಿತ್ ಅವರು ಈಗಾಗಲೇ ಸ್ಥಳೀಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ, ಆರೋಪಿಗಳನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು ಎಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ. ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳದಿದ್ದರೆ, ಸಮಾಜದ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ವೇದಿಕೆ ಎಚ್ಚರಿಕೆ ನೀಡಿದೆ.

ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ಪೋಸ್ಟ್‌ಗಳ ಮೂಲ ಮತ್ತು ಸಂಬಂಧಪಟ್ಟ ವ್ಯಕ್ತಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.