ಉಡುಪಿ: ಕಳೆದ 12 ವರ್ಷಗಳಲ್ಲಿ ನೂರಾರು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಕೇಂದ್ರ ಸರ್ಕಾರದಿಂದ ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಶಿಕ್ಷಣ ಸಚಿವ ಧಮೇಂರ್ದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ಅದೇ ರೀತಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಹೊಣೆಹೊತ್ತು ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಆಗ್ರಹಿಸಿದರು.
ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ನ್ಯಾಯ ಕೇಳಲು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಸಮವಸ್ತ್ರ ರಹಿತರಾಗಿ ಪೊಲೀಸರ ಸೋಗಿನಲ್ಲಿ ಬಂದು ಲಾಠಿಚಾರ್ಜ್ ನಡೆಸಿ ದೌರ್ಜನ್ಯ ಎಸಗಿರುವುದು ಖಂಡನೀಯ ಎಂದು ದೂರಿದರು.
ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ರ್ಖಗೆ ಅವರನ್ನು ಬಂಧಿಸುವ ಮೂಲಕ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದಲ್ಲಿ ಜನರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.
ಎಸ್ ಐ ಆರ್ಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ. ಆದರೆ ಪಶ್ಚಿಮ ಬಂಗಾಲದಲ್ಲಿ ಮಾಡಿದಂತೆ ಕಾರ್ನಾಟಕದಲ್ಲಿ ಸಂಚು ಮಾಡಲು ಕೇಂದ್ರ ಸರ್ಕಾರಕ್ಕೆ ಬಿಡುವುದಿಲ್ಲ. ಮತದಾರರರು ಯಾವುದೇ ಮತದಾನದ ಹಕ್ಕಿನಿಂದ ಹೊರಗುಳಿಯದಂತೆ ಕ್ರಮವಹಿಸಲಾಗುವುದು ಎಂದರು.
ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಜ್ಯೋತಿ ಹೆಬ್ಬಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಮುನಿಯಾಲು ಉದಯ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ಹರೀಶ್ ಕಿಣಿ ಮೊದಲಾದವರು ಉಪಸ್ಥಿತರಿದ್ದರು.

