ಶಾಂತಿಯುತ ಗಣೇಶೋತ್ಸವಕ್ಕೆ ಜಿಲ್ಲಾಡಳಿತ ಸಜ್ಜು : ಉಡುಪಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ

0
7

ಉಡುಪಿ : ಶಾಂತಿಯುತ ಹಾಗೂ ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ವಿವಿಧ ದಿನ ಹಾಗೂ ಅವಧಿಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಪಾಲನೆ ಕಾಪಾಡುವ ಉದ್ದೇಶದಿಂದ ಸೆ.14, 16 ಮತ್ತು 18ರಂದು ನಿಗದಿತ ಅವಧಿಯಲ್ಲಿ ಮದ್ಯ ಮಾರಾಟ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ.

ಸೆ.14ರಂದು ಬೆಳಗ್ಗೆ 6ರಿಂದ ರಾತ್ರಿ 12ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ನಿಷೇಧ ಇರಲಿದೆ. ಸೆ.16ರಂದು ಮಧ್ಯಾಹ್ನ 2ರಿಂದ ರಾತ್ರಿ 12ರವರೆಗೆ ಉಡುಪಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ಇನ್ನು ಸೆ.18ರಂದು ಮಧ್ಯಾಹ್ನ 2ರಿಂದ ರಾತ್ರಿ 12ರವರೆಗೆ ಗಣೇಶ ಮೂರ್ತಿ ವಿಸರ್ಜನೆ ನಡೆಯುವ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಇದರೊಂದಿಗೆ ಗಂಗೊಳ್ಳಿ, ಕುಂದಾಪುರ ನಗರ ಹಾಗೂ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ದಿಷ್ಟ ಗ್ರಾಮಗಳಲ್ಲಿಯೂ ನಿಷೇಧ ಜಾರಿಯಲ್ಲಿರಲಿದೆ.

ಗಣೇಶೋತ್ಸವ ಹಾಗೂ ವಿಸರ್ಜನಾ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಜಾರಿಗೊಳಿಸಲಾಗಿದೆ.