ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ ಎರಡನೇ ಬಾರಿ ಅವಿರೋಧವಾಗಿ ಆಯ್ಕೆಗೊಂಡಿರುವ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರ ಅಭಿನಂದನೆ ಸಮಾರಂಭವು ಸೆ. 24ರಂದು ಮಧ್ಯಾಹ್ನ 12ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಸಭಾಂಗಣದಲ್ಲಿ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಅಭಿನಂದನ ಸಮಿತಿ ಅಧ್ಯಕ್ಷ ಶಶಿಕುಮಾರ್ ರೈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಇತಿಹಾಸದಲ್ಲಿ 1945ರ ಅನಂತರ ದ.ಕ. ಜಿಲ್ಲೆಯನ್ನು ಪ್ರತಿನಿಧಿಸಿದ ಮೊದಲ ಅಧ್ಯಕ್ಷರಾಗಿ 2017ರಲ್ಲಿ ಆಯ್ಕೆಗೊಂಡಿದ್ದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಇದೀಗ ಎರಡನೇ ಬಾರಿಯೂ ಈ ಪ್ರತಿಷ್ಠಿತ ಸಂಸ್ಥೆಯ ಅಧ್ಯಕ್ಷರಾಗುವ ಮೂಲಕ ಇತಿಹಾಸ ನಿರ್ಮಿಸಿರುವುದು ಜಿಲ್ಲೆಗೆ ಹೆಮ್ಮೆಯ ವಿಚಾರ, ಅವರ ಈ ಸಾಧನೆಯನ್ನು ಜಿಲ್ಲೆಯ ಸಹಕಾರಿಗಳು ಸಂಭ್ರಮಿಸುವ ಉದ್ದೇಶದಿಂದ ಈ ಸಮಾರಂಭವನ್ನು ಆಯೋಜಿಸಲಾಗಿದೆ ಎಂದರು.

ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅಭಿನಂದನ ಭಾಷಣ ಮಾಡುವರು, ಶಾಸಕ ಡಿ. ವೇದವ್ಯಾಸ ಕಾಮತ್‌ ಶುಭಾಶಂಸನೆಗೈಯುವರು, ಮುಖ್ಯ ಅತಿಥಿಗಳಾಗಿ ಸೌತ್ ಇಂಡಿಯಾ ಅದಾನಿ ಗ್ರೂಪ್‌ನ ಅಧ್ಯಕ್ಷ ಕಿಶೋರ್ ಆಳ್ವ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿರ್ದೇಶಕರಾಗಿ ಆಯ್ಕೆಯಾಗಿರುವ ಬಕಳಬಾವ ದೇವಿಪ್ರಸಾದ್ ಶೆಟ್ಟಿ, ಬೆಳವು ಭಾಗವಹಿಸಲಿರುವರು. ದೇವಿಪ್ರಸಾದ್ ಶೆಟ್ಟಿ ಅವರನ್ನೂ ಸಮಾನಿಸಲಾಗುವುದು ಎಂದರು.

ವಿಮಾನ ನಿಲ್ದಾಣದಲ್ಲಿ ಸ್ವಾಗತ ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಬೆಳಪು ಮಾತನಾಡಿ, ಡಾ|| ರಾಜೇಂದ್ರ ಕುಮಾರ್ ಅವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಶ್ರೀ ಮಹಾಮಂಡಳದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಸೆ. 24ರಂದು ಬೆಳಗ್ಗೆ ಗಂಟೆ 10.30ಕ್ಕೆ ಆಗಮಿಸುತ್ತಿರುವ ಸಂದರ್ಭದಲ್ಲಿ ಅವರನ್ನು ಜಿಲ್ಲೆಯ ಸಮಸ್ಥ ಸಹಕಾರಿಗಳೆಲ್ಲರೂ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಲಿರುವರು ಎಂದು ತಿಳಿಸಿದರು.

ಸಹಕಾರ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ಮೂಲಕ ಹೊಸ ಆಯಾಮವನ್ನು ಈ ಕ್ಷೇತ್ರಕ್ಕೆ ನೀಡಿರುವ ಎಂ.ಎನ್.ಆರ್. ಅವರು ಸಹಕಾರ ರಂಗದಲ್ಲಿ ಸುಮಾರು 50 ವರ್ಷಗಳ ಕಾಲ ಗುರುತಿಸಿಕೊಂಡು ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಅನುಪಮ ಸೇವೆಗೈದಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಸುಮಾರು 28 ವರ್ಷಗಳ ಕಾಲ ಅಧ್ಯಕ್ಷರಾಗಿ ಸಹಕಾರ ಕ್ಷೇತ್ರದಲ್ಲಿ ಸಾರ್ಥಕ ಸೇವೆಯನ್ನು ಗೈದಿರುವ ಅವರು ಬ್ಯಾಂಕಿನ ಸರ್ವಾಂಗೀಣ ಪ್ರಗತಿಯ ರೂವಾರಿ ಎಂದರು.

ಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ್ ಎಸ್. ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರಾಜು ಎಸ್. ಪೂಜಾರಿ, ಎಸ್‌ ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಎಂ. ವಾದಿರಾಜ ಶೆಟ್ಟಿ ಎಸ್‌.ಬಿ. ಜಯರಾಮ ರೈ ಮೋನಪ್ಪ ಶೆಟ್ಟಿ ಎಕ್ಕಾರು, ಎಂ. ಮಹೇಶ್ ಹೆಗ್ಡೆ, ಕೆ. ಜೈರಾಜ್ ಬಿ. ರೈ, ಬಿ. ಅಶೋಕ್ ಕುಮಾರ್ ಶೆಟ್ಟಿ ಸದಾಶಿವ ಉಳ್ಳಾಲ, ಬಿ. ರಾಜೇಶ್ ರಾವ್, ಸ್ಟ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಬ್ಯಾಂಕಿನ ಸಿಇಓ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

Leave a Reply

Your email address will not be published.