ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ಮುನ್ನೆಚ್ಚರಿಕೆ ಕ್ರಮವಾಗಿ ರಾಯಚೂರು ಜಿಲ್ಲಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಈಶ್ವರ್ ಕುಮಾರ್ ಕಾಂದೂ ಅವರು ಆದೇಶ ಹೊರಡಿಸಿದ್ದಾರೆ.
ಅಂಬೇಡ್ಕರ್ ಜಯಂತಿಯ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮದ್ಯ ಮಾರಾಟ ನಿಷೇಧವು ಈ ಕೆಳಗಿನ ದಿನಾಂಕ ಮತ್ತು ಸಮಯದವರೆಗೆ ಜಾರಿಯಲ್ಲಿರುತ್ತದೆ.
ಪ್ರಾರಂಭ : ಏಪ್ರಿಲ್ 13, 2026ರ ರಾತ್ರಿ 11:00 ಗಂಟೆಯಿಂದ ಏಪ್ರಿಲ್ 15, 2026ರ ಬೆಳಿಗ್ಗೆ 06:00 ಗಂಟೆಯವರೆಗೆ ಈ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ರೀತಿಯ ಮದ್ಯ ತಯಾರಿಕಾ ಘಟಕಗಳು, ಮಾರಾಟ ಮಳಿಗೆಗಳು (ವೈನ್ ಶಾಪ್, ಬಾರ್), ಮದ್ಯ ಸಂಗ್ರಹಣೆ ಮತ್ತು ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಅಬಕಾರಿ ಕಾಯ್ದೆ 1965ರ ಕಲಂ 21 (1) ರ ಅಡಿಯಲ್ಲಿ ಜಿಲ್ಲಾಧಿಕಾರಿಗಳು ಈ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.ಆದೇಶ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕರ ಕೋರಿಕೆಯ ಮೇರೆಗೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಕೋರಲಾಗಿದೆ.

