ಮಂಗಳೂರು: ಉದ್ಯಮಿ, ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಹಾಗೂ ‘ಕೋಟಿ ಚೆನ್ನಯ’ ಚಲನಚಿತ್ರದ ನಿರ್ಮಾಪಕರಾದ ಡಾ. ಆರ್. ಧನರಾಜ್ ಅವರು 2026ನೇ ಸಾಲಿನ ಪ್ರತಿಷ್ಠಿತ ‘ಕರಾವಳಿ ರತ್ನ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಾಸರಗೋಡು ಇದರ ವತಿಯಿಂದ ನವೆಂಬರ್ 28 ಮತ್ತು 29ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಯಲಿರುವ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ-2026 ಹಾಗೂ ಕೇರಳ-ಕರ್ನಾಟಕ ಉತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಮಂಗಳೂರಿನ ಉದ್ಯಮಿಯಾಗಿ ಗುರುತಿಸಿಕೊಂಡಿರುವ ಡಾ. ಆರ್. ಧನರಾಜ್ ಅವರು ಉದ್ಯಮ, ಚಲನಚಿತ್ರ, ರಾಜಕೀಯ, ಸಾಂಸ್ಕೃತಿಕ, ಕ್ರೀಡಾ ಹಾಗೂ ಸಮಾಜಸೇವಾ ಕ್ಷೇತ್ರಗಳಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಬೆಂಗಳೂರು ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.
ತುಳು ಚಲನಚಿತ್ರ ನಿರ್ಮಾಣ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಇವರು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ‘ಕೋಟಿ ಚೆನ್ನಯ’ ಚಲನಚಿತ್ರದ ನಿರ್ಮಾಪಕರಾಗಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿಯೂ ವಿವಿಧ ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸುವ ಮೂಲಕ ಗುರುತಿಸಿಕೊಂಡಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆ ಹಾಗೂ ಸಾಧನೆಗಳನ್ನು ಪರಿಗಣಿಸಿ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಘೋಷಿಸಲಾಗಿದೆ ಎಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಕಾಸರಗೋಡು ಇದರ ಅಧ್ಯಕ್ಷ ಶಿವರಾಮ ಕಾಸರಗೋಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

