ಕರಾವಳಿಯಲ್ಲಿ ಬರದ ಛಾಯೆ : ಐದು ತಾಲೂಕುಗಳು ಬರಪೀಡಿತ

0
8

ಮಂಗಳೂರು : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬರಪೀಡಿತ ಎಂದು ಘೋಷಿಸಿರುವ ತಾಲೂಕುಗಳ ಪೈಕಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಐದು ತಾಲೂಕುಗಳು ಸೇರಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ ಹಾಗೂ ಉಳ್ಳಾಲ ತಾಲೂಕುಗಳು ಮತ್ತು ಉಡುಪಿ ಜಿಲ್ಲೆಯ ಉಡುಪಿ ಹಾಗೂ ಬೈಂದೂರು ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಲಾಗಿದೆ.

ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಅಂಕೋಲ, ಶಿರಸಿ ಹಾಗೂ ಹಳಿಯಾಳ ತಾಲೂಕುಗಳನ್ನೂ ಬರಪೀಡಿತ ಎಂದು ಸರ್ಕಾರ ಘೋಷಿಸಿದೆ. ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಹಾಗೂ ನೀರಿನ ಲಭ್ಯತೆಯ ಮೇಲೆ ಉಂಟಾಗಿರುವ ಪರಿಣಾಮವನ್ನು ಪರಿಗಣಿಸಿ ಬರ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ.

ಬರಪೀಡಿತ ತಾಲೂಕುಗಳಲ್ಲಿ ಉಂಟಾಗಿರುವ ಪರಿಸ್ಥಿತಿಯ ಕುರಿತು ಕಂದಾಯ, ಕೃಷಿ ಹಾಗೂ ತೋಟಗಾರಿಕಾ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ. ಸಮೀಕ್ಷಾ ವರದಿಯ ಆಧಾರದ ಮೇಲೆ ಬರದಿಂದ ಉಂಟಾಗಿರುವ ಬೆಳೆಹಾನಿ ಹಾಗೂ ಇತರ ಪರಿಣಾಮಗಳನ್ನು ಪರಿಶೀಲಿಸಿ ಪರಿಹಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ.

ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ನೀರಿನ ವ್ಯವಸ್ಥೆ ಹಾಗೂ ಅಂತರ್ಜಲ ಮರುಪೂರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ.

ಸಮೀಕ್ಷಾ ವರದಿ ಸಲ್ಲಿಕೆಯ ಬಳಿಕ ಅರ್ಹತೆ ಹಾಗೂ ಸರ್ಕಾರದ ನಿಯಮಾನುಸಾರ ಪರಿಹಾರ ಮೊತ್ತ ಬಿಡುಗಡೆ ಮಾಡುವ ಪ್ರಕ್ರಿಯೆ ನಡೆಯಲಿದೆ. ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರು ಹಾಗೂ ಗ್ರಾಮೀಣ ಪ್ರದೇಶಗಳ ಜನರು ಸರ್ಕಾರದ ಪರಿಹಾರ ಕ್ರಮಗಳ ನಿರೀಕ್ಷೆಯಲ್ಲಿದ್ದಾರೆ.