ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ನಿವಾಸಿ ನರಸಿಂಹ ಮಾಣಿ (44) ಅವರ ಉಡುಪಿ ಜಿಲ್ಲೆ ಪ್ರವೇಶವನ್ನು ಮೂರು ತಿಂಗಳ ಅವಧಿಗೆ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.
ಆದೇಶದಂತೆ 2026ರ ಆಗಸ್ಟ್ 13ರಿಂದ ನವೆಂಬರ್ 12ರವರೆಗೆ ಉಡುಪಿ ಜಿಲ್ಲೆಯಾದ್ಯಂತ ನರಸಿಂಹ ಮಾಣಿ ಅವರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಈ ನಿರ್ಬಂಧಿತ ಆದೇಶಕ್ಕೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆ ಅಥವಾ ಹೇಳಿಕೆಗಳಿದ್ದಲ್ಲಿ, ಆಗಸ್ಟ್ 12ರ ಮಧ್ಯರಾತ್ರಿ 12 ಗಂಟೆಯೊಳಗೆ ಲಿಖಿತ ರೂಪದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.
ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆ ಸ್ವೀಕರಿಸದಿದ್ದಲ್ಲಿ, ಸಂಬಂಧಪಟ್ಟ ವ್ಯಕ್ತಿಯಿಂದ ಯಾವುದೇ ಹೇಳಿಕೆ ಅಥವಾ ಆಕ್ಷೇಪಣೆ ಇಲ್ಲವೆಂದು ಪರಿಗಣಿಸಿ ನಿಯಮಾನುಸಾರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
ಈ ನೋಟಿಸ್‌ನ್ನು ಸಂಬಂಧಪಟ್ಟವರಿಗೆ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೂ ಸೂಚನೆ ನೀಡಲಾಗಿದೆ.

