ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಹೊಣೆ : ಎಂ.ಪುರುಷೋತ್ತಮ್

0
13

ಉಡುಪಿ : ಮನುಷ್ಯ ಸಂಕುಲದ ಉಳಿವಿಗಾಗಿ ಪ್ರಕೃತಿಯನ್ನು ಸಂರಕ್ಷಿಸುವ ಕೆಲಸವನ್ನು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರು ನಿಷ್ಠೆಯಿಂದ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಪುರುಷೋತ್ತಮ್ ತಿಳಿಸಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ ಪ್ರಕಾರ ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯವಾಗಿದೆ. ಆಧುನೀಕರಣ ಮತ್ತು ಕೈಗಾರಿಕೀಕರಣದಿಂದ ಪರಿಸರ ಮಾಲಿನ್ಯ ಹೆಚ್ಚುತ್ತಿದ್ದು, ವಿದ್ಯಾರ್ಥಿಗಳು ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಮಾನವನ ದುರಾಸೆಯಿಂದ ಜಾಗತಿಕ ತಾಪಮಾನ ಏರಿಕೆ ಮತ್ತು ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿವೆ. ಪ್ರತಿಯೊಬ್ಬರೂ ಅರಣ್ಯ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಸುವತ್ತ ಗಮನಹರಿಸಬೇಕು ಎಂದು ಕರೆ ನೀಡಿದರು.

ಮಂಗಳೂರು ವಿಭಾಗದ ಹಿರಿಯ ಪರಿಸರ ಅಧಿಕಾರಿ ರಾಜಶೇಖರ್ ಬಿ. ಪುರಾಣಿಕ್ ಅವರು ತ್ಯಾಜ್ಯ ವಿಂಗಡಣೆ ಹಾಗೂ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕುವಂತೆ ತಿಳಿಸಿದರು. ಕಾರ್ಯಕ್ರಮಕ್ಕೂ ಮುನ್ನ ಗಣ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗಿಡಗಳನ್ನು ನೆಟ್ಟರು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ಚಿತ್ರಕಲಾ ಮತ್ತು ರೀಲ್ಸ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ಹಾಗೂ ಪರಿಸರ ಸ್ನೇಹಿ ಜೂಟ್ ಬ್ಯಾಗ್‌ಗಳನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here