ನವದೆಹಲಿ : ನೀಟ್ (NEET) ಸೇರಿದಂತೆ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗೆ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ದೇಶದ ನಾಲ್ಕು ರಾಜ್ಯಗಳಲ್ಲಿ 5 ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಸ್ಥಾಪಿಸಲಾಗಿದೆ.
ಮಾಹಿತಿಯ ಪ್ರಕಾರ, ಮುಂಬೈ ಪೀಠದಲ್ಲಿ ಎರಡು, ಹಾಗೂ ಮಧ್ಯಪ್ರದೇಶ, ಕೊಲ್ಕತ್ತಾ ಮತ್ತು ದೆಹಲಿ ಹೈಕೋರ್ಟ್ ವ್ಯಾಪ್ತಿಯಲ್ಲಿ ತಲಾ ಒಂದು ಫಾಸ್ಟ್ ಟ್ರ್ಯಾಕ್ ಕೋರ್ಟ್ ಕಾರ್ಯಾರಂಭ ಮಾಡಲಾಗಿದೆ.
ಈ ವಿಶೇಷ ನ್ಯಾಯಾಲಯಗಳಲ್ಲಿ ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣಗಳನ್ನಷ್ಟೇ ಆದ್ಯತೆಯ ಮೇಲೆ ವಿಚಾರಣೆ ನಡೆಸಲಾಗುತ್ತದೆ. ಪ್ರಕರಣಗಳ ತ್ವರಿತ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಶೀಘ್ರ ಶಿಕ್ಷೆ ವಿಧಿಸುವ ಉದ್ದೇಶದಿಂದ ಈ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ.
ಪ್ರಧಾನಿ ಮೋದಿ ಅವರು ಇಂದು ಬೆಳಿಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಯುವಕರ ಭವಿಷ್ಯ ಹಾಗೂ ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆಯನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರದ ಈ ಕ್ರಮದಿಂದ ನೀಟ್ ಸೇರಿದಂತೆ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳ ಮೇಲಿನ ವಿದ್ಯಾರ್ಥಿಗಳ ವಿಶ್ವಾಸ ಹೆಚ್ಚಲಿದ್ದು, ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಸಂದೇಶ ರವಾನೆಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

