ಮಂಗಳೂರು: ಹಿರಿಯ ಸಾಹಿತಿ ನಾ. ಡಿಸೋಜ ಅವರು ಅನಾರೋಗ್ಯ ಹಿನ್ನೆಲೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧರಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಡಿನ ಹಿರಿಯ ಸಾಹಿತಿ ನಾ.ಡಿಸೋಜಾ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಸಾಹಿತ್ಯ ಕೃಷಿಯ ಜೊತೆಯಲ್ಲಿ ಪರಿಸರ ರಕ್ಷಣೆಯ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ನಾ.ಡಿಸೋಜಾ ಅವರು ಜನಪರ ಕಾಳಜಿಯ ಲೇಖಕ. ನಾ.ಡಿಸೋಜಾ ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪೋಸ್ಟ್ ಮಾಡಿ, ಹಿರಿಯ ಸಾಹಿತಿ ಡಾ. ನಾ ಡಿಸೋಜ ದೈವಾಧೀನರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ವಿಶೇಷವಾಗಿ ಮಲೆನಾಡಿನ ಸೊಬಗು, ಸಂಸ್ಕೃತಿಗಳಿಗೆ ಅಕ್ಷರ ರೂಪ ನೀಡುತ್ತಿದ್ದ ನಾ ಡಿಸೋಜ ಅವರ ನಿಧನದಿಂದ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ನಷ್ಟವುಂಟಾಗಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಕುಟುಂಬದವರಲ್ಲಿ ತೀವ್ರ ಸಂತಾಪ ಸಲ್ಲಿಸುತ್ತೇನೆಂದು ಹೇಳಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪೋಸ್ಟ್ ಮಾಡಿ, ಕನ್ನಡ ಸಾರಸ್ವತ ಲೋಕದ ಬಹುದೊಡ್ಡ ಹೆಸರು, ಬಹುಮುಖ ಪ್ರತಿಭೆಯ ಬರಹಗಾರರು ಆಗಿದ್ದ ಡಾ.ನಾ ಡಿಸೋಜ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ಆರು ದಶಕಗಳ ಕಾಲ ಕನ್ನಡ ಸಾಹಿತ್ಯಸಿರಿಯನ್ನು ಶ್ರೀಮಂತಗೊಳಿಸಿದ ಶ್ರೀಯುತರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಅನೇಕ ಪ್ರತಿಷ್ಠಿತ ಗೌರವಗಳಿಗೆ ಪಾತ್ರರಾಗಿದ್ದಾರೆ. ಮಂಜಿನ ಕಾನು, ಈ ನೆಲ ಈ ಜಲ, ನೆಲೆ, ಗಾಂಧಿ ಬಂದರು, ದ್ವೀಪ, ಜೀವಕಳೆ, ಚೆನ್ನಮ್ಮ ಚೆನ್ನಮ್ಮಾಜಿ, ಒಡ್ಡು ಸೇರಿ 40ಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಅವರ ಕೊಡುಗೆ ಅನನ್ಯ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.