ಕಾರ್ಕಳ: ರೆಂಜಾಳ ಗ್ರಾಮದ ಹೇಡ್ಮೆ ಪ್ರದೇಶದಲ್ಲಿ ಹರಿಪ್ರಸಾದ್ ಹಾಗೂ ಸುಮಿತ್ರ ಅವರ ಮನೆಯ ಸಮೀಪ ಭೂಕುಸಿತ ಸಂಭವಿಸುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಅವರು ಆಗಸ್ಟ್ 4ರಂದು ಸಂಜೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಭೂಕುಸಿತದ ಭೀತಿಯಿಂದ ಎರಡೂ ಕುಟುಂಬಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಅವರನ್ನು ತಾತ್ಕಾಲಿಕವಾಗಿ ರೆಂಜಾಳ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರದಲ್ಲಿ ವಾಸ್ತವ್ಯ ಹೂಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಅದರಂತೆ, ಬುಧವಾರ ಸಂತ್ರಸ್ತ ಕುಟುಂಬಗಳನ್ನು ಸುರಕ್ಷಿತವಾಗಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ, ಅವರಿಗೆ ಅಗತ್ಯವಾದ ವಸತಿ, ಆಹಾರ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಕಳ ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಂಡರು.
ಭೂಕುಸಿತದ ಭೀತಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

