ಕಾರ್ಕಳದ ಕರಿಯಕಲ್ಲು ತ್ಯಾಜ್ಯ ಘಟಕದಲ್ಲಿ ಬೆಂಕಿ : ಅಗ್ನಿಶಾಮಕ ದಳದ ಹರಸಾಹಸ

0
17

ಕಾರ್ಕಳ : ನಗರದ ಕರಿಯಕಲ್ಲು ಪ್ರದೇಶದಲ್ಲಿರುವ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಗುರುವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟಕದಲ್ಲಿ ಸಂಗ್ರಹಿಸಲಾಗಿದ್ದ ಅಪಾರ ಪ್ರಮಾಣದ ತ್ಯಾಜ್ಯಕ್ಕೆ ಬೆಂಕಿ ಹೊತ್ತಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ರಾತ್ರಿ ಸುಮಾರು 10.45ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು.

ಘಟಕದಲ್ಲಿ ಅಪಾರ ಪ್ರಮಾಣದ ತ್ಯಾಜ್ಯ ಸಂಗ್ರಹವಾಗಿದ್ದರಿಂದ ಬೆಂಕಿ ಕ್ಷಿಪ್ರವಾಗಿ ವ್ಯಾಪಿಸಿತು. ಇದರಿಂದ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ಸಿಬ್ಬಂದಿ ಹಲವು ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಬೇಕಾಯಿತು. ಸತತ ಪ್ರಯತ್ನದ ಬಳಿಕ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾದರು.

ಕಾರ್ಯಾಚರಣೆಯಲ್ಲಿ ಕಾರ್ಕಳ ಅಗ್ನಿಶಾಮಕ ಠಾಣಾಧಿಕಾರಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಅಗ್ನಿಶಾಮಕ ಸಿಬ್ಬಂದಿಗಳಾದ ಹರಿಪ್ರಸಾದ್, ಚಾಲಕ ಶ್ರೀಧರ್, ಭೀಮಪ್ಪ ಹಾಗೂ ಬಸವರಾಜ ಸೇರಿದಂತೆ ತಂಡದ ಸದಸ್ಯರು ಪಾಲ್ಗೊಂಡಿದ್ದರು.

ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಬೆಂಕಿಯಿಂದ ಉಂಟಾದ ಹಾನಿಯ ಪ್ರಮಾಣದ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here