ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಅಪ್ರಾಪ್ತ ಸೇರಿ ನಾಲ್ವರ ಬಂಧನ

0
21

ಉಡುಪಿ: ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಡಿದ್ದಾರೆ.

ನವೆಂಬರ್ 3ರಂದು ಮಧ್ಯಪ್ರದೇಶಕ್ಕೆ ತೆರಳಿ ಭೋಪಾಲ್ ರೈಲ್ವೆ ನಿಲ್ದಾಣದ ಬಳಿ ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ ಪತ್ರಾವನದ ಸುಖ್ಪುರ, ಬಂಗಾಲಿ ಪಟ್ಟಿಯ ನಿವಾಸಿ ಪವನ್ ಕುಮಾರ್ (24) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಶಕ್ಕೆ ಪಡೆದಿದ್ದರು. ಪವನ್ ಕುಮಾರ್ನನ್ನು ನವೆಂಬರ್ 5ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಸುರಕ್ಷತೆಯ ದೃಷ್ಟಿಯಿಂದ ಪರಿವೀಕ್ಷಣಾಲಯದಲ್ಲಿ ಇರಿಸಲಾಗಿದೆ.

ಪ್ರಕರಣದ ಉಳಿದ ಆರೋಪಿಗಳಾದ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮುನಿಯಾಲು, ವೀರ ಸಾವರ್ಕರ್ ನಗರದ ಗಾಂಧಿ ಮೈದಾನದ ಬಳಿಯ ನಿವಾಸಿ ಆದರ್ಶ ಕಾಂಚನ್ ಹಾಗೂ ಕಾರ್ಕಳ ತಾಲೂಕಿನ ವರಂಗ ಗ್ರಾಮದ ಮುನಿಯಾಲು ಅಂಚೆಯ ದಿನೇಶ್ ಶೆಟ್ಟಿ ಅವರನ್ನು ನವೆಂಬರ್ 7ರ ರಾತ್ರಿ ಕಾರ್ಕಳದಲ್ಲಿ ವಶಕ್ಕೆ ಪಡೆಯಲಾಗಿದೆ.

ಪ್ರಕರಣದ ಆರೋಪಿಗಳ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ಮಾರ್ಗದರ್ಶನದಲ್ಲಿ, ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಬ್ರಹ್ಮಾವರ ವೃತ್ತ ನಿರೀಕ್ಷಕರ ವಿಶೇಷ ತಂಡವನ್ನು ರಚಿಸಲಾಗಿತ್ತು.