ಕುತ್ಲೂರು ಶಾಲಾ ವಠಾರದಲ್ಲಿ ಹಣ್ಣುಗಳ ಉದ್ಯಾನ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಭರವಸೆ

0
12

ಉಜಿರೆ : ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಗ್ರಾಮದಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮೂಡಬಿದ್ರೆ ಉಪವಿಭಾಗದ ಅರಣ್ಯಇಲಾಖೆ ಹಾಗೂ ಶಾಲೆಯ ವನಸಿರಿ ಪರಿಸರ ಸಂಘದ ಆಶ್ರಯದಲ್ಲಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮವನ್ನು ಅರಣ್ಯಇಲಾಖೆಯ ಮೂಡಬಿದ್ರೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಉದ್ಘಾಟಿಸಿ ಶುಭ ಹಾರೈಸಿದರು.

ಅರಣ್ಯ ಇಲಾಖೆ ವತಿಯಿಂದ ಶಾಲಾ ಆವರಣದಲ್ಲಿ ಹಣ್ಣುಗಳ ಉದ್ಯಾನ ನಿರ್ಮಿಸಿಕೊಡುವುದಾಗಿ ಅವರು ಭರವಸೆ ನೀಡಿದರು. ಶಾಲಾ ವಠಾರದಲ್ಲಿ ಗಿಡನೆಟ್ಟು ಉತ್ತಮ ರೀತಿಯಲ್ಲಿ ಬೆಳೆಸುವ ಪ್ರತಿ ವಿದ್ಯಾರ್ಥಿಗೆ ತಲಾ ಇನ್ನೂರು ರೂ. ಬಹುಮಾನ, ಶಾಲಾಶಿಕ್ಷಕರೊಬ್ಬರ ಮಾಸಿಕ ವೇತನ ಎಂಟು ಸಾವಿರ ರೂ. ಹಾಗೂ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ಗಳನ್ನು ತನ್ನ ವೈಯಕ್ತಿಕ ದೇಣಿಗೆಯಾಗಿ ನೀಡುವುದಾಗಿ ಅವರು ಪ್ರಕಟಿಸಿದರು.

ಪರಿಸರ ಸಂರಕ್ಷಣೆಯಲ್ಲಿ ಸಂಘ-ಸಂಸ್ಥೆಗಳ ಪಾತ್ರ ಮಹತ್ವಪೂರ್ಣವಾಗಿದೆ ಎಂದು ಹೇಳಿದ ಅವರು ಶಾಲೆಯ ಪ್ರಗತಿಗೆ ಜಿಲ್ಲಾ ಪತ್ರಕರ್ತರ ಸಂಘದ ಕೊಡುಗೆಯನ್ನು ಶ್ಲಾಘಿಸಿ ಅಭಿನಂದಿಸಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಅವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್, ಬಿ.ಎನ್. ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕನಕವರ್ಮ ಜೈನ್ ಮತ್ತು ಉಪಾಧ್ಯಕ್ಷರಾದ ಶ್ವೇತಾಜಗದೀಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು