ತುಳುವ ಮಹಾಸಭೆ ಇಂಟರ್ನ್ಯಾಷನಲ್ ಗೋವಾ ರಾಜ್ಯ ಅಧ್ಯಕ್ಷರಾಗಿ ಗಣೇಶ್ ಶೆಟ್ಟಿ ಇರ್ವತ್ತೂರು ನೇಮಕ

0
44

ಕಟೀಲ್ : 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ ನ ಗೋವಾ ರಾಜ್ಯ ಅಧ್ಯಕ್ಷರಾಗಿ ಖ್ಯಾತ ಸಮಾಜಸೇವಕ ಹಾಗೂ ತುಳುಕೂಟ ಗೋವಾ ಅಧ್ಯಕ್ಷ ಗಣೇಶ್ ಶೆಟ್ಟಿ ಇರುವತ್ತೂರು ಅವರನ್ನು ನೇಮಕ ಮಾಡಲಾಗಿದೆ.

ಗಣೇಶ್ ಶೆಟ್ಟಿ ಇರ್ವತ್ತೂರು ಅವರು ಹಲವು ವರ್ಷಗಳಿಂದ ಗೋವಾದಲ್ಲಿ ತುಳು ಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಉಳಿವು-ಬೆಳವಣಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ತುಳುಕೂಟ ಗೋವಾ ಅಧ್ಯಕ್ಷರಾಗಿ ಅನೇಕ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಸಮುದಾಯದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಿ, ಗೋವಾದ ತುಳುವರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಅವರ ಸಮಾಜಸೇವೆ, ಸಂಘಟನಾ ಸಾಮರ್ಥ್ಯ ಹಾಗೂ ತುಳು ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಬದ್ಧತೆಯನ್ನು ಪರಿಗಣಿಸಿ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಅಂತರರಾಷ್ಟ್ರೀಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಕರ್ನಾಟಕ ರಾಜ್ಯ ಅಧ್ಯಕ್ಷ ದೇವೇಂದ್ರ ಹೆಗ್ಗಡೆ ಕೊಕ್ರಾಡಿ, ಕೇಂದ್ರೀಯ ಅಧ್ಯಕ್ಷ ಡಾ. ಅವಿನ್ ಬಿ. ಆರ್. ಆಳ್ವ ಹಾಗೂ ಪ್ರಧಾನ ಕಾರ್ಯದರ್ಶಿ ಅರವಿಂದ ಬೆಳ್ಚಾಡ ಅವರು ಅವರನ್ನು ಗೋವಾ ರಾಜ್ಯ ಅಧ್ಯಕ್ಷರಾಗಿ ನೇಮಕಗೊಳಿಸಿದ್ದಾರೆ.

2028ರ ಶತಮಾನೋತ್ಸವದ ಅಂಗವಾಗಿ ಗೋವಾ ರಾಜ್ಯದಲ್ಲಿ ತುಳುವ ಮಹಾಸಭೆಯ ಸಂಘಟನೆಯನ್ನು ಬಲಪಡಿಸುವುದು, ತುಳು ಭಾಷೆ ಮತ್ತು ಸಂಸ್ಕೃತಿಯ ಪ್ರಚಾರ, ಯುವಜನರನ್ನು ಸಂಘಟಿಸುವುದು ಹಾಗೂ ಗೋವಾದಾದ್ಯಂತ ತುಳುವ ಮಹಾಸಭೆಯ ಘಟಕಗಳನ್ನು ವಿಸ್ತರಿಸುವ ಜವಾಬ್ದಾರಿಯನ್ನು ಅವರು ವಹಿಸಲಿದ್ದಾರೆ.

ಈ ನೇಮಕವನ್ನು ತುಳುವರ್ಲ್ಡ್ ಫೌಂಡೇಶನ್ನ ಗೌರವಾಧ್ಯಕ್ಷ ಹರಿನಾರಾಯಣ ದಾಸ ಅಸ್ರಣ್ಣ, ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು, ಕಾರ್ಯದರ್ಶಿ ವಸಂತ ರೈ ಕುತ್ತೇತ್ತೂರು ಹಾಗೂ ನಿರ್ದೇಶಕ ಡಾ. ರಾಜೇಶ್ ಕೃಷ್ಣ ಆಳ್ವ ಅವರು ಹರ್ಷದಿಂದ ಸ್ವಾಗತಿಸಿ, ಗಣೇಶ್ ಶೆಟ್ಟಿ ಇರುವತ್ತೂರು ಅವರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here