60 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಬಳಿಕ ಹಲ್ಲೆ ಮಾಡಿ ಕೊಲೆ ಮಾಡಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ ಈ ಘಟನೆ ಲಖನೌನ ಮೋಹನ್‌ಲಾಲ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಡರಾತ್ರಿ ಘಟನೆ ನಡೆದಿದ್ದು, ಖಾಲಿ ಜಾಗವೊಂದರ ಪೊದೆಗಳಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ದೇಹದ ಮೇಲೆ ತೀವ್ರ ಗಾಯದ ಗುರುತುಗಳಿದ್ದು, ಮಹಿಳೆಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ತಿಳಿದುಬಂದಿದೆ.
ಪೊಲೀಸರ ಪ್ರಕಾರ, ಮಧ್ಯಾಹ್ನ ಮಲವಿಸರ್ಜನೆಗೆ ತೆರಳಿದ್ದ ಗ್ರಾಮಸ್ಥರೊಬ್ಬರು ಮಹಿಳೆಯ ಕಿರುಚಾಟ ಕೇಳಿ ಸ್ಥಳದತ್ತ ತೆರಳಿದ್ದಾರೆ. ಬಳಿಕ ಪೊದೆಗಳಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯ ಶವ ಕಂಡುಬಂದಿದ್ದು, ತಕ್ಷಣ ಕುಟುಂಬಸ್ಥರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳದ ಸಮೀಪ ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಪತ್ತೆಯಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬನ ಬಗ್ಗೆ ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಒಬ್ಬರು ಮೃತ ಮಹಿಳೆಯ ದೂರದ ಸಂಬಂಧಿ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಮಹಿಳೆ ಆರೋಪಿಗಳಲ್ಲಿ ಒಬ್ಬನೊಂದಿಗೆ ಮದ್ಯ ಸೇವಿಸಿದ್ದಳು ಎನ್ನಲಾಗಿದ್ದು, ಬಳಿಕ ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ನಂತರ ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪದ ಬಗ್ಗೆಯೂ ತನಿಖೆ ಮುಂದುವರಿದಿದೆ.
ಮಹಿಳಾ ವಿಧಿವಿಜ್ಞಾನ ತಜ್ಞರು ಹಾಗೂ ವೈದ್ಯರ ವಿಶೇಷ ತಂಡ ಶವದ ಮರಣೋತ್ತರ ಪರೀಕ್ಷೆ ನಡೆಸಿದೆ. ಮರಣೋತ್ತರ ಪರೀಕ್ಷೆಯಲ್ಲಿ ಕತ್ತು ಹಿಸುಕಿರುವುದು ಹಾಗೂ ದೇಹದ ಮೇಲೆ ತೀವ್ರ ಗಾಯಗಳಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಶಂಕಿತನ ಪಾತ್ರದ ಬಗ್ಗೆಯೂ ತನಿಖೆ ನಡೆಯುತ್ತಿದ್ದು, ಘಟನೆಗೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ.

