
ಮೂಡುಬಿದಿರೆ : ಮಿಜಾರು ಎಂಬಲ್ಲಿನ ಬಾಡಿಗೆ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಗಾಯಗೊಂಡವರನ್ನು ಆಳ್ವಾಸ್ ಕಾಲೇಜಿನ ಸೆಕ್ಯುರಿಟಿ ಗಾರ್ಡ್ ಶಿವರಾಮ (31), ಅವರ ಪತ್ನಿ ಗಂಗಾ (25) ಹಾಗೂ ಪುತ್ರ ಆದರ್ಶ್ (6) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಶಿವರಾಮ ಅವರಿಗೆ ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಅವರ ಪತ್ನಿ ಹಾಗೂ ಪುತ್ರನಿಗೂ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಗ್ಯಾಸ್ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿರುವುದು ಘಟನೆಗೆ ಕಾರಣ ಎನ್ನಲಾಗಿದ್ದು, ಸೋರಿಕೆಯಾದ ಅನಿಲಕ್ಕೆ ಬೆಂಕಿ ತಗುಲಿದ ಪರಿಣಾಮ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ಹಾಗೂ ಅನಿಲ ಸೋರಿಕೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
