ಬಾಲಕಿಗೆ ಬೆದರಿಕೆ, ಎರಡು ಬಾರಿ ಅತ್ಯಾಚಾರ : ಅಪರಾಧಿಗೆ ಕಠಿಣ ಶಿಕ್ಷೆ

0
42

ಪುತ್ತೂರು : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಪುತ್ತೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಒಟ್ಟು 75 ಸಾವಿರ ರೂ. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಅಲ್ಲದೆ, ಸಂತ್ರಸ್ತ ಬಾಲಕಿಗೆ 12 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.

ಶಿಕ್ಷೆಗೊಳಗಾದ ಅಪರಾಧಿಯನ್ನು ಪುತ್ತೂರು ತಾಲೂಕಿನ ರೆಂಜಿಲಾಡಿ ಗ್ರಾಮದ ಪೆಲತ್ರಾಣೆ ನಿವಾಸಿ ಸದ್ದಾಂ ಎಂದು ಗುರುತಿಸಲಾಗಿದೆ.

2018ರಲ್ಲಿ ಅಪ್ರಾಪ್ತ ಬಾಲಕಿಯು ತನ್ನ ಅಜ್ಜಿ ಮನೆಯಲ್ಲಿ ವಾಸವಿದ್ದ ಸಂದರ್ಭದಲ್ಲಿ ರಾತ್ರಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಆರೋಪಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ. ಮೂರು ದಿನಗಳ ಬಳಿಕ ಮತ್ತೊಮ್ಮೆ ಇದೇ ಕೃತ್ಯ ಎಸಗಿದ್ದು, ಈ ವಿಚಾರವನ್ನು ಮನೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಸಂತ್ರಸ್ತ ಬಾಲಕಿ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪುತ್ತೂರು ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕೆ. ಅವರು ಪ್ರಾಥಮಿಕ ತನಿಖೆ ನಡೆಸಿದ್ದು, ಬಳಿಕ ಸರ್ಕಲ್ ಇನ್ಸ್‌ಪೆಕ್ಟರ್ ಡಿ. ಮಂಜುನಾಥ್ ಅವರು ತನಿಖೆ ಪೂರ್ಣಗೊಳಿಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಒಟ್ಟು 22 ಸಾಕ್ಷಿಗಳ ವಿಚಾರಣೆ ನಡೆಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶೆ ಸುಮಂಗಲಾ ಚಕಲಬ್ಬಿ ಅವರು ಪೋಕ್ಸೊ ಕಾಯ್ದೆಯಡಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಒಂದು ವರ್ಷ ಹೆಚ್ಚುವರಿ ಕಠಿಣ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.

ಇದಲ್ಲದೆ, ಐಪಿಸಿ ಕಲಂ 506ರಡಿ ಒಂದು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಲಾಗಿದ್ದು, ದಂಡ ಪಾವತಿಸದಿದ್ದಲ್ಲಿ ಮತ್ತೆ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಲಾಗಿದೆ.

ಸಂತ್ರಸ್ತ ಬಾಲಕಿಗೆ 12 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ. ಸರಕಾರದ ಪರವಾಗಿ ಪೋಕ್ಸೊ ವಿಶೇಷ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯ ವಾದ ಮಂಡಿಸಿದ್ದರು.