ಬೆಂಗಳೂರು: ಗ್ರಾಮ ಪಂಚಾಯತ್ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಯ ನ್ಯಾಯಯುತ ಬೇಡಿಕೆಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ತಜ್ಞರ ತಂಡ ರಚಿಸಬೇಕು ಎಂಬ ಶಾಸಕ ದಿನೇಶ್ ಗೂಳಿಗೌಡ ಅವರ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಮಂಡಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಿದ್ದಾರೆ.
ಗ್ರಾಮ ಪಂಚಾಯತ್ ಸದಸ್ಯರು, ನೌಕರರ ಸಮಸ್ಯೆ ಕುರಿತು ಶಾಸಕ ದಿನೇಶ್ ಗೂಳಿಗೌಡ ಸಿಎಂ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆಗೆ ಪತ್ರ ಬರೆದಿದ್ದರು. ಈಗ ಶಾಸಕರ ಪತ್ರಕ್ಕೆ ಮಾನ್ಯತೆ ನೀಡಿರುವ ಸಿದ್ದರಾಮಯ್ಯ ತಜ್ಞರ ಸಮಿತಿ ರಚನೆ ಸಂಬಂಧ ಪರಿಶೀಲಿಸಿ ಪ್ರಸ್ತಾವನೆ ಮಂಡಿಸಲು ಸೂಚಿಸುವ ಮೂಲಕ ಗ್ರಾ.ಪಂ. ಸದಸ್ಯರು ಹಾಗೂ ನೌಕರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಪಂಚಾಯಿತಿ ಒಕ್ಕೂಟಗಳ ಪದಾಧಿಕಾರಿಗಳ ಸಭೆ ನಡೆಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಈ ಕುರಿತಂತೆ ತಜ್ಞರ ತಂಡ ರಚನೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಗ್ರಾಮ ಪಂಚಾಯತಿ ಸದಸ್ಯರು, ನೌಕರರ ಪರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಶಾಸಕ ದಿನೇಶ್ ಗೂಳಿಗೌಡ ಹೇಳಿದ್ದಾರೆ.