ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೂ. 01.00 ಕೋಟಿ ವೆಚ್ಚದಲ್ಲಿ 08 ಕಾಲುಸಂಕಗಳ ನಿರ್ಮಾಣಕ್ಕೆ ಸರಕಾರದ ಅನುಮೋದನೆ -ವಿ ಸುನಿಲ್‌ ಕುಮಾರ್

0
10

ಕಾರ್ಕಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ರೂ.1.00 ಕೋಟಿ ವೆಚ್ಚದಲ್ಲಿ 8 ಕಾಲುಸಂಕಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಕಾರ್ಕಳ ವಿಧಾನಸಭಾ ಕ್ಷೇತ್ರದ ಅನೇಕ ಗ್ರಾಮೀಣ ಪ್ರದೇಶಗಳಲ್ಲಿ ಹಳ್ಳ–ತೋಡುಗಳನ್ನು ದಾಟಿ ಸಂಚರಿಸುವುದು ರೈತರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ವಿಶೇಷವಾಗಿ ಮಳೆಗಾಲದಲ್ಲಿ ಸಂಚಾರ ಅಪಾಯಕಾರಿಯಾಗಿದ್ದು, ರೈತರಿಗೆ ಕೃಷಿಗೆ ಸಂಬಂಧಿಸಿದ ಯಂತ್ರೋಪಕರಣಗಳನ್ನು ಸಾಗಿಸುವುದೂ ಕಷ್ಟಕರವಾಗಿತ್ತು. ಈ ಸಮಸ್ಯೆಗಳನ್ನು ಮನಗಂಡು ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಕಾಲುಸಂಕಗಳ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡುವಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖಾ ಸಚಿವರಿಗೆ ಶಾಸಕರಾದ ವಿ. ಸುನಿಲ್ ಕುಮಾರ್ ಅವರು ಪತ್ರದ ಮೂಲಕ ಹಾಗೂ ಮೌಖಿಕವಾಗಿ ಹಲವು ಬಾರಿ ಮನವಿ ಮಾಡಿದ್ದರು.

ಈ ಪ್ರಯತ್ನದ ಫಲವಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ರೂ.1 ಕೋಟಿ ಅನುದಾನ ಮಂಜೂರಾಗಿದ್ದು, ದಿನಾಂಕ 31-12-2025 ರಂದು ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಅಗತ್ಯ ಇಲಾಖಾ ಪ್ರಕ್ರಿಯೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದು ವಿಕಾಸ ಶಾಸಕರ ಜನಸೇವಾ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಈ ಯೋಜನೆಯಿಂದ ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಸುರಕ್ಷಿತ ಸಂಚಾರ ಹಾಗೂ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ತಿಳಿಸಲಾಗಿದೆ.

LEAVE A REPLY

Please enter your comment!
Please enter your name here