ಕಿರುಕುಳ ಆರೋಪದ ಪ್ರಕರಣ : ವಿಚಾರಣೆಗೆ ನೋಟಿಸ್‌ ಪಡೆದಿದ್ದ ಯುವಕ ಆತ್ಮಹತ್ಯೆ

0
33

ಮಂಗಳೂರು : ಬೀಚ್‌ನಲ್ಲಿ ಪ್ರೇಮಿಗಳ ಜೋಡಿಯೊಂದಕ್ಕೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಯುವಕನೋರ್ವ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ತನ್ನ ನಿವಾಸದಲ್ಲಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಕ್ಟೋಬರ್‌ 25ರಂದು ಬೀಚ್‌ನಲ್ಲಿ ಪ್ರೇಮಿಗಳ ಜೋಡಿಯೊಂದಕ್ಕೆ ಕಿರುಕುಳ ನೀಡಿದ ಆರೋಪದಡಿ ಯುವಕ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೆ, ವಿಚಾರಣೆಗೆ ಹಾಜರಾಗುವಂತೆ ಆರೋಪಿಗಳಿಗೆ ನೋಟಿಸ್‌ ನೀಡಲಾಗಿತ್ತು ಎಂದು ತಿಳಿದುಬಂದಿದೆ.

ಮಂಗಳವಾರ ಬೆಳಗ್ಗೆ ಯುವಕ ತನ್ನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ಅಷ್ಟರಲ್ಲಾಗಲೇ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಘಟನಾ ಸ್ಥಳದಲ್ಲಿ ಡೆತ್‌ನೋಟ್‌ ಪತ್ತೆಯಾಗಿದ್ದು, ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಯುವಕ ಬರೆದಿದ್ದಾನೆ ಎನ್ನಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.