ಬೆಂಗಳೂರು: ಅಕ್ರಮ ಗಣಿಗಾರಿಕೆ ಮತ್ತು ಸ್ಫೋಟಕ ಕಾನೂನಿನಡಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವುದನ್ನು ಖಂಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ, ಪೊಲೀಸರನ್ನು ನಿಂಧಿಸಿದ ಪ್ರಕರಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾತಿಯಿಂದ ವಿನಾಯತಿ ನೀಡಿ ಹೈಕೋರ್ಟ್ ಆದೇಶಿಸಿದೆ. ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಕಾನೂನು ಪರಿಹಾರ ಪಡೆದುಕೊಳ್ಳುವಂತೆ ಶಾಸಕ ಪೂಂಜಾಗೆ ಹೈಕೋರ್ಟ್ ನಿರ್ದೇಶಿಸಿದೆ.
ಬೆಳ್ತಂಗಡಿ ಠಾಣಾ ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ಅರ್ಜಿಗಳನ್ನು ಇತ್ಯರ್ಥಪಡಿಸಿ, ಈ ನಿರ್ದೇಶ ನೀಡಿದರು.
ದೋಷಾರೋಪ ಪಟ್ಟಿ ಸಲ್ಲಿಕೆಯಾಗಿರುವುದರಿಂದ ಆರೋಪಗಳನ್ನು ಕೈಬಿಡಲು ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿದಾರರು ಅರ್ಜಿ ಸಲ್ಲಿಸಲಿ. ನ್ಯಾಯಾಲಯವು ಎಂಟು ವಾರಗಳಲ್ಲಿ ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸಬೇಕು. ಅಲ್ಲದೆ ತೀರ್ಮಾನವನ್ನೂ ಕೈಗೊಳ್ಳಬೇಕು. ಅಲ್ಲಿವರೆಗೆ ವಿಚಾರಣೆಗೆ ಹಾಜರಾಗುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಬಾರದು ಎಂದು ಹೈಕೋರ್ಟ್ ನ್ಯಾಯಪೀಠ ತಿಳಿಸಿದೆ.
ಅಕ್ರಮ ಗಣಿಗಾರಿಕೆ ಮತ್ತು ಸ್ಫೋಟಕ ಕಾನೂನಿನಡಿ ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಅವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಇದರಿಂದ ಆಕ್ರೋಶಿತರಾಗಿದ್ದ ಹರೀಶ್ ಪೂಂಜಾ ಠಾಣೆಗೆ ಭೇಟಿ ನೀಡಿ ಪ್ರತಿಭಟಿಸಿದ್ದರು. ಅಲ್ಲದೆ ಬಳಿಕ ಈ ಪ್ರತಿಭಟನೆ ನಡೆಸಿ ಪೊಲೀಸರನ್ನು ನಿಂದಿಸಿದ್ದರು ಎಂಬ ಆರೋಪಗಳಡಿ ಎಫ್‌ಐಆರ್ ದಾಖಲಾಗಿದ್ದವು.